ವಿಜಯನಗರ/ವಿಜಯಪುರ: ರಾಜ್ಯದಲ್ಲಿ ಮತ್ತೆ ದಲಿತ ಮುಖ್ಯಮಂತ್ರಿ ಕೂಗು ಕೇಳಿಬಂದಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾನೂನು ಸಂಕಷ್ಟ ಎದುರಾದ ಬೆನ್ನಲ್ಲೇ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ “ದಲಿತ ಸಿಎಂ’ ಚರ್ಚೆಗೆ ರೆಕ್ಕೆಪುಕ್ಕಗಳು ಬಂದಿವೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಭೇಟಿ ಮಾಡಿರುವ ಬಗ್ಗೆ ಹೆಚ್ಚಿನ ಅರ್ಥ ಕಲ್ಪಿಸಬೇಕಿಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ರಾಜ್ಯದ ಕೆಲವು ನಾಯಕರು ಹೇಳಿಕೆ ನೀಡಿದ್ದಾರೆ.
ದಲಿತ ಸಿಎಂ ಆಗಬೇಕು ಎನ್ನುವವರಲ್ಲಿ ನಾನೂ ಒಬ್ಬ. ಆದರೆ ಸದ್ಯ ಸಿಎಂ ಕುರ್ಚಿ ಖಾಲಿ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದ್ದಾರೆ. ಮಾಧ್ಯಮದವರು ಈ ಬಗ್ಗೆ ಕೂಗಿದರೆ ಆಯಿತಾ ಎಂದು ರಾಜಣ್ಣ ವ್ಯಂಗ್ಯವಾಡಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಭೇಟಿಗೆ ಹೆಚ್ಚಿನ ಮಹತ್ವ ನೀಡಬೇಕಿಲ್ಲ. ಖರ್ಗೆಯವರ ಆರೋಗ್ಯ ವಿಚಾರಿಸಲು ಜಾರಕಿಹೊಳಿ ಹೋಗಿದ್ದಾರೆ. ಈ ಬಗ್ಗೆ ಹೆಚ್ಚು ಚರ್ಚೆ ಮಾಡುವ ಅಗತ್ಯವಿಲ್ಲ. ನಾನಂತೂ ಸಿಎಂ ರೇಸ್‌ನಲ್ಲಿ ಇಲ್ಲ. ಚುನಾವಣಾ ರಾಜಕಾರಣದಿಂದ ದೂರ ಉಳಿದು, ಸಕ್ರಿಯ ರಾಜಕಾರಣದಲ್ಲಿರುವ ಬಗ್ಗೆ ಈಗಾಗಲೇ ಸ್ಪಷ್ಟ ಪಡಿಸಿದ್ದೇನೆ ಎಂದರು.