ಗದಗ: ‘ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂಬುದು ಊಹಾಪೋಹ ಅಲ್ಲ. ನೂರಕ್ಕೆ ನೂರು ಸತ್ಯ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
‘ಅವರು ಕೆಳಗಿಳಿಯುತ್ತಿರುವುದು ಗೊತ್ತಾಗಿರುವ ಕಾರಣದಿಂದಲೇ ಕೆಲವು ನಾಯಕರು ತಮ್ಮ ಬಳಿ ಎಷ್ಟು ಜನ ಇದ್ದಾರೆ ಎಂಬುದನ್ನು ತೋರಿಸಲು ಸಭೆ ನಡೆಸುತ್ತಿದ್ದಾರೆ’ ಎಂದು ಬುಧವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.
ಸಿಎಂ ರಾಜೀನಾಮೆ ಕೊಡುವ ಸಂದರ್ಭದಲ್ಲಿ ಜಾತಿಗಣತಿ ದಾಳ ಉರುಳಿಸಿದ್ದಾರೆ. ಆದರೆ, ಸಿಎಂ ಸ್ಥಾನ ಉಳಿಸಲು ಸಾಧ್ಯವಿಲ್ಲ. ರಾಜ್ಯದ ಜನರು ದಡ್ಡರಲ್ಲ, ಈ ಎಲ್ಲ ಬೆಳವಣಿಗೆಗಳನ್ನೂ ಗಮನಿಸುತ್ತಿದ್ದಾರೆ’ ಎಂದು ಹೇಳಿದರು.
‘ಭಂಡತನ ಮುಂದುವರಿಸಲು ಬಹಳ ದಿನ ಸಾಧ್ಯವಿಲ್ಲ. ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಂದರ್ಭಕ್ಕೆ ಬಂದು ನಿಂತಿದ್ದಾರೆ. ಸಿಎಂ ರಾಜೀನಾಮೆ ನೀಡುವುದು ಸತ್ಯ. ಅತಿ ಶೀಘ್ರದಲ್ಲೇ ಮಾಹಿತಿ ಸಿಗಲಿದೆ. ಬಿಜೆಪಿ- ಜೆಡಿಎಸ್ ಪಾದಯಾತ್ರೆ ಪರಿಣಾಮ ಸಿಎಂ ರಾಜೀನಾಮೆ ಕೊಡುತ್ತಾರೆ. ವಿರೋಧ ಪಕ್ಷದಲ್ಲಿ ಯಶಸ್ವಿಯಾಗಿ ಕೆಲಸ ಮಾಡುತ್ತಿದ್ದೇವೆ. ಅದಕ್ಕೆ ಸಂತೋಷ ಇದೆ’ ಎಂದು ಹೇಳಿದರು.