ಬೆಳಗಾವಿ: ‘ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನಕ್ಕೆ ಹೊಸ ಮುಖ್ಯಮಂತ್ರಿಯನ್ನು ಸ್ವಾಗತಿಸಲಾಗುವುದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮುಡಾ ಹಗರಣದ ಕಾರ್ಮೋಡ ಮುಖ್ಯಮಂತ್ರಿ ಕುರ್ಚಿ ಆವರಿಸಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಅವರೇ ಒಪ್ಪಿಕೊಂಡಿದ್ದಾರೆ. ಇದರಿಂದ ಸಿದ್ದರಾಮಯ್ಯ ಆತ್ಮವಿಶ್ವಾಸ ಕಳೆದುಕೊಂಡಿದ್ದಾರೆ. ಅವರ ಸ್ಥಾನದ ಮೇಲೆ ಕಣ್ಣಿಟ್ಟಿರುವರು, ತಮಗೆ ಬೆಂಬಲ ಕೋರಿ ರಹಸ್ಯ ಸಭೆ ನಡೆಸುತ್ತಿದ್ದಾರೆ’ ಎಂದರು.
‘ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಒಪ್ಪಿಕೊಳ್ಳುವುದಿಲ್ಲ’ ಎಂಬ ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಹೈಕಮಾಂಡ್‌ನಿಂದ ನನ್ನನ್ನು ಅಧ್ಯಕ್ಷನಾಗಿ ನೇಮಿಸಿದೆ. ಒಪ್ಪಿಕೊಳ್ಳಲು ಕೆಲವರಿಗೆ ಸಮಯಾವಕಾಶ ಬೇಕು. ನನ್ನ ತಂದೆಯವರಿಗೂ ಇಂಥದ್ದೇ ಅನುಭವಗಳು ಆಗಿದ್ದವು. ಮುಂದೆ ಎಲ್ಲವೂ ಸರಿಯಾಗುತ್ತದೆ’ ಎಂದರು.
‘ಈಗ ಶಾಸಕ ಬಾಲಚಂದ್ರ ಜಾರಕಿಹೊಳಿ ನನಗೆ ಸಿಕ್ಕಿದ್ದಾರೆ. ಶಾಸಕ ರಮೇಶ ಜಾರಕಿಹೊಳಿ ಅವರನ್ನು ಹುಡುಕಾಡುತ್ತಿದ್ದೇನೆ. ಅವರೂ ಸಿಗುತ್ತಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.