ದಾವಣಗೆರೆ: ಇಲ್ಲಿನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮಹಿಳೆಯರ ಮತ್ತು ಮಕ್ಕಳ ವಿಭಾಗ ಹಾಗೂ ತುರ್ತು ಚಿಕಿತ್ಸಾ ಕೇಂದ್ರದ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ತಿಂಗಳುಗಳೇ ಕಳೆದರೂ ಉದ್ಘಾಟನೆ ಭಾಗ್ಯ ಕೂಡಿಬಂದಿಲ್ಲ.
ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿ ಅಂದಾಜು ₹ 35 ಕೋಟಿ ವೆಚ್ಚದಲ್ಲಿ ಮಹಿಳೆಯರ ಮತ್ತು ಮಕ್ಕಳ ವಿಭಾಗದ ಕಟ್ಟಡ ನಿರ್ಮಾಣ ಕಾಮಗಾರಿ 2021ರಲ್ಲಿ ಆರಂಭವಾಗಿತ್ತು.
ಕಾಮಗಾರಿ ಪೂರ್ಣಗೊಂಡು ಆರು ತಿಂಗಳು ಕಳೆದಿದೆ. ಸ್ಮಾರ್ಟ್ ಸಿಟಿ ಯೋಜನೆ ಅಡಿ ₹ 13 ಕೋಟಿ ವೆಚ್ಚದಲ್ಲಿ ತುರ್ತು ಚಿಕಿತ್ಸಾ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕೆ 2021ರ ಜೂನ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಬೈರತಿ ಬಸವರಾಜ ಭೂಮಿಪೂಜೆ ನೆರವೇರಿಸಿದ್ದರು. 2023ರ ಮೇ ವೇಳೆಗೆ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದರೂ ಜನರ ಸೇವೆಗೆ ಲಭ್ಯವಾಗಿಲ್ಲ.