ಮುಂಡರಗಿ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಮಂಗಳವಾರ ಬೆಳಗಿನ ಜಾವ ಭಾರಿ ಮಳೆ ಸುರಿದಿದ್ದು, ಮಳೆ ಹಾಗೂ ಗಾಳಿಯ ರಭಸಕ್ಕೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಕೊಯ್ಲಿಗೆ ಬಂದಿದ್ದ ಪೈರು ನೆಲಕಚ್ಚಿದೆ.
ಭಾರಿ ಗಾಳಿ ಬೀಸಿದ್ದರಿಂದ ತಾಲ್ಲೂಕಿನ ಹೆಸರೂರು, ಕಕ್ಕೂರು, ಕೊರ್ಲಹಳ್ಳಿ, ಗಂಗಾಪುರ, ಶೀರನಹಳ್ಳಿ, ಶಿಂಗಟಾಲೂರ, ಹಮ್ಮಿಗಿ, ಬಿದರಳ್ಳಿ ಮೊದಲಾದ ನದಿ ದಂಡೆಗಳ ಗ್ರಾಮಗಳಲ್ಲಿ ಕೊಯ್ಲಿಗೆ ಬಂದಿದ್ದ ಭತ್ತದ ಪೈರು ನೆಲಕ್ಕುರುಳಿದೆ.
ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ರೈತರು ಅಪಾರ ಪ್ರಮಾಣದ ಮೆಕ್ಕೆಜೋಳ ಬೆಳೆದಿದ್ದು, ಬಹುತೇಕ ಗ್ರಾಮಗಳಲ್ಲಿ ಮೆಕ್ಕೆಜೋಳ ಕೊಯ್ಲಿಗೆ ಬಂದಿದೆ. ಕೆಲವು ಗ್ರಾಮಗಳಲ್ಲಿ ರೈತರು ಮೆಕ್ಕೆಜೋಳ ಕೊಯ್ಲು ಮಾಡಿದ್ದಾರೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೆಕ್ಕೆಜೋಳದ ಒಕ್ಕಲು ಕಾರ್ಯಕ್ಕೆ ತೀವ್ರ ತೊಂದರೆಯಾಗಿದ್ದು, ರೈತರು ಪರದಾಡುವಂತಾಗಿದೆ.