ಮುಂಡರಗಿ: ಕಬ್ಬಿನ ದರ ನಿಗದಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳುವ ಉದ್ದೇಶದಿಂದ ತಾಲ್ಲೂಕಿನ ವಿವಿಧ ರೈತ ಸಂಘಟನೆಗಳ ಮುಖಂಡರು ಸೋಮವಾರ ಪಟ್ಟಣದಲ್ಲಿ ಪೂರ್ವಭಾವಿ ಸಭೆ ನಡೆಸಿದರು.
ಸಭೆಯ ನಂತರ ತಹಶೀಲ್ದಾರ್ ಕಚೇರಿಗೆ ತೆರಳಿ ಈ ಕುರಿತು ತಹಶೀಲ್ದಾರ್ ಎರ್ರಿಸ್ವಾಮಿ ಪಿ.ಎಸ್.
ಅವರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕಿನ ಗಂಗಾಪುರ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜಯನಗರ ಶುಗರ್ಸ್ ಸಕ್ಕರೆ ಕಾರ್ಖಾನೆಯವರು ಕಡಿಮೆ ಬೆಲೆಗೆ ರೈತರಿಂದ ಕಬ್ಬು ಖರೀದಿಸುತ್ತಿದ್ದು, ದರ ನಿಗದಿಯಲ್ಲಿ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ರೈತರು ಆರೋಪಿಸಿದರು.
ಪ್ರಸ್ತುತ ವರ್ಷ ಕೇಂದ್ರ ಸರ್ಕಾರವು ಪ್ರತಿ ಟನ್ ಕಬ್ಬಿಗೆ ₹3,182 ದರ ನಿಗದಿಗೊಳೊಸಿದೆ. ಆದರೆ ಇಲ್ಲಿಯ ಸಕ್ಕರೆ ಕಾರ್ಖಾನೆಯವರು ಕೇವಲ ₹2,550 ಟನ್ ಕಬ್ಬು ಖರೀಧಿಸುವುದಾಗಿ ತಿಳಿಸಿದ್ದಾರೆ. ಇದರಿಂದ ರೈತರಿಗೆ ಭಾರಿ ನಷ್ಟವಾಗುತ್ತಿದ್ದು, ಇಲ್ಲಿಯ ಸಕ್ಕರೆ ಕಾರ್ಖಾನೆಯವರು ಕೇಂದ್ರ ಸರ್ಕಾರ ನಿಗದಿಗೊಳಿಸಿರುವ ದರಕ್ಕೆ ಕಬ್ಬು ಖರೀಧಿಸಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸರ್ಕಾರ ನಿಗದಿಗೊಳಿಸಿರುವ ಎಫ್.ಆರ್.ಪಿ. ದರದಂತೆ ಕಬ್ಬು ಕಟಾವು, ಸಾಗಣೆ ಮೊದಲಾದ ವೆಚ್ಚಗಳನ್ನು ಕಡಿತಗೊಳಿಸಿಕೊಂಡು ರೈತರ ಪ್ರತಿ ಟನ್ ಕಬ್ಬಿಗೆ ಕನಿಷ್ಟ ₹2,900 ನೀಡಬೇಕು. ಆ ಮೂಲಕ ರೈತರಿಗೆ ಉಂಟಾಗುವ ಹಾನಿಯ ಪ್ರಮಾಣವನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.