ಹಾಸನ: ಬಿಜೆಪಿ- ಜೆಡಿಎಸ್ ನಡುವೆ ಸಮನ್ವಯದ ಕೊರತೆ ಇಲ್ಲ. ಕಾಂಗ್ರೆಸ್ ನಾಯಕರಲ್ಲಿ ಭಿನ್ನಾಭಿಪ್ರಾಯವಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಬಹಿರಂಗವಾಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಭಾನುವಾರ ಹಾಸನಾಂಬ ದೇವಿ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಚುನಾವಣೆಯಲ್ಲಿ ಯಾವುದೇ ಲೋಪವಾಗದಂತೆ ಮೈತ್ರಿ ಧರ್ಮವನ್ನು ಪಾಲಿಸಲಾಗುವುದು.
ಚುನಾವಣಾ ಪ್ರಚಾರಕ್ಕೆ ಬಿಜೆಪಿ ಎಲ್ಲ ನಾಯಕರು ಬರಲಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ಮೂರು ಉಪಚುನಾವಣೆಗಳ ದಿನಾಂಕ ಘೋಷಣೆಯಾಗಿ ನಾಮಪತ್ರ ಸಲ್ಲಿಕೆ ಮುಗಿದಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ದೇಶದ ಗಮನ ಸೆಳೆದಿದ್ದು, ಇಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲ್ಲುವುದು ನಿಶ್ಚಿತ. ಯಾವುದೇ ಅನುಮಾನ ಬೇಡ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದ ಮೂರು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಗೆಲ್ಲಲಿದ್ದು, ರಾಜ್ಯದ ರಾಜಕೀಯ ಬದಲಾವಣೆಗೆ ದಿಕ್ಸೂಚಿ ಆಗಲಿದೆ ಎಂದರು.
ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ರಾಜಕೀಯ ಮಾಡುತ್ತಾರೆ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಅವರು, ನಾನು ಮಾಡುವ ಕೆಲಸದ ಲೆಕ್ಕ ಕೇಳುವುದು ಪ್ರಧಾನಿ. ಇವರಿಗೆ ನಾನು ಏನನ್ನೂ ಹೇಳುವ ಅವಶ್ಯಕತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.