ಬೆಂಗಳೂರು,ಅಕ್ಟೋಬರ್ 29: ಲೋಕಸಭೆ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ಸುಲಿಗೆ ಮಾಡಿದ ಆರೋಪದಲ್ಲಿ ಬಂಧಿತರಾಗಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸಹೋದರ ಮತ್ತಿತರರ ಬಿಡುಗಡೆಗೆ ಹೈಕೋರ್ಟ್ ಆದೇಶ ನೀಡಿದೆ. ಅದೇ ರೀತಿ ಎಫ್‌ಐಆರ್ ರದ್ದುಗೊಳಿಸುವಂತೆ ಪೊಲೀಸರಿಗೆ ಸೂಚಿಸಿದೆ.
ಬಿಜೆಪಿಯಿಂದ ಟಿಕೆಟ್ ಕೊಡಿಸುವ ಆರೋಪಕ್ಕಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಹೋದರ ಗೋಪಾಲ್ ಜೋಶಿ, ಅವರ ಪುತ್ರ ಅಜಯ್ ಜೋಶಿ ಮತ್ತು ಎಸ್. ವಿ. ವಿಜಯಲಕ್ಷ್ಮಿ ಅವರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ಸೋಮವಾರ ತಡೆ ನೀಡಿದೆ. ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆಯೂ ಆದೇಶ ಹೊರಡಿಸಿದೆ.
ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ಸುಲಿಗೆ ಮಾಡಿದ್ದಾರೆ ಎಂದು ಮಾಜಿ ಶಾಸಕ ದೇವಾನಂದ್ ಫೂಲ್ ಸಿಂಗ್ ಚವ್ಹಾಣ್ ಅವರ ಪತ್ನಿ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಯಲ್ಲಿ ದೂರು ದಾಖಲಿಸಿದ್ದರು. ಇವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ದೇವಾನಂದ್ ಚವ್ಹಾಣ್ ವಿಜಯಪುರ ಜಿಲ್ಲೆ ನಾಗಠಾಣ ಕ್ಷೇತ್ರದ ಮಾಜಿ ಶಾಸಕರಾಗಿದ್ದಾರೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಸಹೋದರ ಗೋಪಾಲ ಜೋಶಿ, ಸಹೋದರಿ ವಿಜಯಲಕ್ಷ್ಮಿ ಜೋಶಿ ಹಾಗೂ ಅಜಯ್ ಜೋಶಿ ಹೈಕೋರ್ಟ್ ಮೆಟ್ಟಿಲೇರಿದ್ದರು.
Laxmi News 24×7