ವಿಜಯಪುರ: ಜಿಲ್ಲೆಯ ರೈತರ ಜಮೀನಿನ ಉತಾರೆಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಿರುವುದನ್ನು ವಿರೋಧಿಸಿ ರೈತ ಸಂಘದ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ರಾತ್ರಿ ದೀಪಗಳನ್ನು ಬೆಳಗಿಸಿ, ಪ್ರತಿಭಟನೆ ನಡೆಸುವ ಮೂಲಕ ಆಹೋರಾತ್ರಿ ಧರಣಿ ಕೈಗೊಂಡರು.
ನಗರದ ಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಹೊರಟು, ಜಿಲ್ಲಾಧಿಕಾರಿಗಳ ಕಚೇರಿಗೆ ಸಂಜೆ ಆಗಮಿಸಿದರು.
ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮ್ಮದ್ ಅವರ ಭಾವಚಿತ್ರಗಳ ಎದುರು ದೀಪ ಬೆಳಗಿಸಿ, ಅಹೋರಾತ್ರಿ ಧರಣಿ ನಡೆಸಿದರು. ಬಳಿಕ ಅಲ್ಲಿಯೇ ಅಡುಗೆ ತಯಾರಿಸಿ, ಊಟ ಮಾಡುವ ಮೂಲಕ ಹೋರಾಟ ನಡೆಸಿದರು.
ಧರಣಿ ಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣಸ್ವಾಮಿ, ಬಿಜೆಪಿ ಮುಖಂಡ ಉಮೇಶ ಕಾರಜೋಳ ಭೇಟಿ ನೀಡಿ, ಬೆಂಬಲ ವ್ಯಕ್ತಪಡಿಸಿದರು. ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮತ್ತಿತರರು ಧರಣಿಯಲ್ಲಿ ಪಾಲ್ಗೊಂಡಿದ್ದರು.