ಬೆಂಗಳೂರು, ಅಕ್ಟೋಬರ್ 30: ಕರ್ನಾಟಕ ಸರ್ಕಾರ ಎಲ್ಲಾ ಸರ್ಕಾರಿ ನೌಕರರು ಗುರುತಿನ ಚೀಟಿಯನ್ನು ಕೊರಳಿಗೆ ಹಾಕಿಕೊಳ್ಳಬೇಕು ಎಂದು ಆದೇಶಿಸಿದೆ. ಈಗಾಗಲೇ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರಿಗೆ ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿ ಕೊರಳುದಾರವನ್ನು (ಟ್ಯಾಗ್) ನೀಡಲಾಗುತ್ತಿದೆ.
ಇದನ್ನು ಕಡ್ಡಾಯವಾಗಿ ಧರಿಸಬೇಕು ಎಂದು ತಿಳಿಸಲಾಗಿದೆ.
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಬುಧವಾರ ಆದೇಶವನ್ನು ಹೊರಡಿಸಿದೆ. ನವೆಂಬರ್ 1ರಿಂದಲೇ ಜಾರಿಗೆ ಬರುವಂತೆ ಕಡ್ಡಾಯವಾಗಿ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿ ಧರಿಸಬೇಕು. ಇದನ್ನು ಎಲ್ಲರೂ ಕಡ್ಡಾಯವಾಗಿ ಪಾವತಿಸಬೇಕು ಎಂದು ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ.
ಸುತ್ತೋಲೆಯ ವಿವರಗಳು: ಅಕ್ಟೋಬರ್ 28ರಂದು ಸಂದೀಪ್ ಬಿ. ಕೆ. ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ರಾಜಕೀಯ) ಸುತ್ತೋಲೆಯೊಂದನ್ನು ಹೊರಡಿಸಿದ್ದರು. ಈ ಸುತ್ತೋಲೆ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು, ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು (ಟ್ಯಾಗ್) ಹಾಕಿಕೊಳ್ಳುವುದರ ಕುರಿತು ಎಂಬ ವಿಷಯ ಒಳಗೊಂಡಿತ್ತು.
ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕೆಂಪು ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ದಿನಾಂಕ 16.08.2024 ರ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು.