ಬೆಂಗಳೂರು, – ಒಳ ಜಗಳದಿಂದಾಗಿ ಬಿಜೆಪಿ 2013ರಲ್ಲಿ ಹೊಡೆದು ಹೋಳಾದಂತೆ ಮುಂದಿನ ದಿನಗಳಲ್ಲಿ ಮತ್ತೆ ಇಬ್ಬಾಗವಾಗಲಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಭವಿಷ್ಯ ನುಡಿದಿದ್ದಾರೆ. ನಗರದ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್‍ನಲ್ಲಿ ಕಾಂಗ್ರೆಸ್‍ನ ಹಿರಿಯ ನಾಯಕರ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‍ಗೆ ಸೋಲಾಗಿರಬಹುದು. ಬಿಜೆಪಿ ಗೆದ್ದಿರಬಹುದು. ಆದರೆ, ಪರಿಸ್ಥಿತಿ ಹೀಗೆ ಇರುದಿಲ್ಲ ಎಂದು ಹೇಳಿದರು.
ಕಾಂಗ್ರೆಸ್‍ನಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿವೆ. ಆದರೆ ಅವು ಸರಿ ಹೋಗುತ್ತವೆ. ಆದರೆ, ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನಗಳು ನಡೆಯುತ್ತಿವೆ. ನಮಗಿಂತಲೂ ಅವರಲ್ಲೇ ಹೆಚ್ಚು ಭಿನ್ನಾಭಿಪ್ರಾಯಗಳಿವೆ. ಬಿಜೆಪಿಯ ಪರಿಸ್ಥಿತಿ ಹೀಗೆ ಇರುವುದಿಲ್ಲ. 2013ರಲ್ಲಿ ಯಡಿಯೂರಪ್ಪ, ಶ್ರೀರಾಮುಲು ಅವರು ಪ್ರತ್ಯೇಕ ಪಕ್ಷ ಕಟ್ಟಿಕೊಂಡಿದ್ದಾಗ ಬಿಜೆಪಿ ಹೊಡೆದು ಚೂರಾಗಿತ್ತು.