ಬೆಂಗಳೂರು, ನವೆಂವರ್ 18: ರಾಜ್ಯದ ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಮೇಲೆ ಹೊರೆಯಾಗಿಲ್ಲ ಎಂಬ ಅಚ್ಚರಿಯ ಹೇಳಿಕೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಿದೆ ಎಂದು ನಾನು ಹೇಳುವುದಿಲ್ಲ, ಬದಲಿಗೆ ಆರ್ಥಿಕ ಅದಕ್ಷತೆ, ಅಸಮರ್ಪಕ ನಿರ್ವಹಣೆಯಿಂದ ಖಜಾನೆ ಬರಿದಾಗಿ ರಾಜ್ಯವು ಸಾಲದ ದವಡೆಗೆ ಸಿಲುಕಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದರು.
ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ತೆರಿಗೆ ಸಂಗ್ರಹ ಆಗುತ್ತಿದೆ. ಅಲ್ಲದೆ ಈ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ನಿರಂತರವಾಗಿ ತೆರಿಗೆ, ಶುಲ್ಕ ಹೆಚ್ಚಿಸುತ್ತಾ ಬಂದಿದೆ. ಗ್ಯಾರಂಟಿಗಳಿಗೆ ವರ್ಷಕ್ಕೆ ₹52,000 ರಿಂದ ₹60,000 ಕೋಟಿ ಆಗುತ್ತದೆ ಎಂದು ಸರಕಾರ ಹೇಳುತ್ತಿದೆ. ಆದರೆ, ಸಂಗ್ರಹ ಆಗುತ್ತಿರುವ ಜನರ ತೆರಿಗೆ ದುಡ್ಡು ಎಲ್ಲಿ ಹೋಗುತ್ತಿದೆ? ಇದಕ್ಕೆ ಉತ್ತರ ಕೊಡಬೇಕಲ್ಲವೇ? ಎಂದು ಹೆಚ್ ಡಿ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.