ಬೆಂಗಳೂರು, (ನವೆಂಬರ್ 25): ಶಿಗ್ಗಾಂವಿ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಬಳಿಕ ಸಿಎಂ ಸಿದ್ದರಾಮಯ್ಯ ಮನವಿ ಮೇರೆಗೆ ಉಮೇದುವಾರಿಕೆ ವಾಪಸ್ ಪಡೆದುಕೊಂಡಿದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿಗೆ ಬಂಪ್ ಗಿಫ್ಟ್ ನೀಡಲಾಗಿದೆ. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಗಮದ ಅಧ್ಯಕ್ಷರನ್ನಾಗಿ ಅಜ್ಜಂಪೀರ್ ಖಾದ್ರಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಶಿಗ್ಗಾಂವಿ ಉಪಚುನಾವಣೆ ವೇಳೆ ತಮ್ಮ ಮಾತಿಗೆ ಬೆಲೆ ಕೊಟ್ಟು ನಾಮಪತ್ರ ವಾಪಸ್ ಪಡೆದುಕೊಂಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ, ಎರಡೇ ದಿನದಲ್ಲಿ ಖಾದ್ರಿ ಅವರಿಗೆ ಈ ಗಿಫ್ಟ್ ನೀಡಿದ್ದಾರೆ.
ಶಿಗ್ಗಾಂವಿ ವಿಧಾನಸಭೆ ಉಪಚುನಾವಣೆ ಟಿಕೆಟ್ ಗಾಗಿ ಖಾದ್ರಿ ಸಾಕಷ್ಟು ಕಸರತ್ತು ನಡೆಸಿದ್ದರು. ಆದ್ರೆ, ಕೊನೆ ಕ್ಷಣದಲ್ಲಿ ಹೈಕಮಾಂಡ್ ಯಾಸೀರ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡಿತ್ತು, ಇದರಿಂದ ಪಕ್ಷದ ವಿರುದ್ಧ ಸಿಡಿದೆದ್ದಿದ್ದ ಖಾದ್ರಿ, ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಬಳಿಕ ಸಚಿವ ಜಮೀರ್ ಅಹಮ್ಮದ್ ಖಾನ್ ಮನವೊಲಿಸಿದರು ಪ್ರಯೋಜನವಾಗಿರಲಿಲ್ಲ.