ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ ಮಿತ್ರಕೂಟದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿರುವ ಬಿಜೆಪಿಗೆ ಸಿಎಂ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ.
ಆದರೆ, ಸಿಎಂ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ಇನ್ನೂ ಘೋಷಣೆಯಾಗಿಲ್ಲ. ಈ ನಡುವೆ ಡಿಸೆಂಬರ್ 5 ರಂದು ಮುಂಬೈನ ಆಜಾದ್ ಮೈದಾನದಲ್ಲಿ ಮಹಾಯುತಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಘೋಷಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕೂಡ ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಗಾದಿಗಾಗಿ ಮಹಾಯುತಿಯ ಮೂರು ಘಟಕಗಳಾದ ಬಿಜೆಪಿ, ಎನ್‌ಸಿಪಿ ಮತ್ತು ಶಿವಸೇನೆ ನಡುವಿನ ಜಗಳದ ನಡುವೆಯೇ ಪ್ರಮಾಣವಚನ ಸ್ವೀಕಾರದ ದಿನಾಂಕ ಘೋಷಣೆಯಾಗಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ.ಮಹಾರಾಷ್ಟ್ರದಲ್ಲಿ ಮುಂದಿನ ಸಂಪುಟದಲ್ಲಿ ಖಾತೆ ಹಂಚಿಕೆ ಕುರಿತು ಮೈತ್ರಿಕೂಟವು ಅಂತಿಮ ಒಪ್ಪಂದಕ್ಕೆ ಬಂದಿಲ್ಲ. ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕ ಮತ್ತು ಸ್ಥಳವನ್ನು ನಿರ್ಧರಿಸಲಾಗಿದೆ. ಆದರೆ ಮುಂದಿನ ಮುಖ್ಯಮಂತ್ರಿಯ ಹೆಸರನ್ನು ಇನ್ನೂ ಘೋಷಿಸಲಾಗಿಲ್ಲ. ಆದರೆ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಇನ್ನೂ ಮುಖ್ಯಮಂತ್ರಿ ರೇಸ್ನಲ್ಲಿ ಮುಂಚೂಣಿಯಲ್ಲಿದ್ದಾರೆ.