ಬೆಂಗಳೂರು, ಡಿಸೆಂಬರ್ 14: ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಿಂದ (Gruha Lakshmi Scheme) ಸಹಕಾರಿಯಾಗಿದೆ ಎಂದು ಕರ್ನಾಟಕದ ಸಾಕಷ್ಟು ಮಹಿಳೆಯರು ಈ ಹಿಂದೆ ಹೇಳಿಕೊಂಡಿದ್ದಾರೆ. ಗೃಹಲಕ್ಷ್ಮಿಯಿಂದ ಬಂದ ಹಣದಲ್ಲಿ ಮಹಿಳೆಯರು ಒಳ್ಳೆಯ ಕೆಲಸಗಳನ್ನು ಮಾಡಿದ ಉದಾಹರಣೆಗಳಿವೆ. ಇತ್ತೀಚೆಗೆ ಬೆಳಗಾವಿಯ ವೃದ್ಧೆಯೊಬ್ಬರು ಗೃಹಲಕ್ಷ್ಮಿ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿದ್ದರು. ಅದೇ ರೀತಿಯಾಗಿ ಇದೀಗ ಗದಗಿನ ಅತ್ತೆ-ಸೊಸೆ ಅದೇ ಹಣದಿಂದ ಬೋರ್ವೆಲ್ ಕೊರೆಸಿದ್ದಾರೆ. ಈ ಬಗ್ಗೆ ಸುದ್ದಿ ಮಾಡಿತ್ತು. ಅದನ್ನು ಉಲ್ಲೇಖಿಸಿ ಡಿಸಿಎಂ ಡಿಕೆ ಶಿವಕುಮಾರ್ ಸಂದೇಶ ನೀಡಿದ್ದಾರೆ.
ಟೀಕೆಗಳು ಸಾಯ್ತವೆ, ಕೆಲಸಗಳು ಉಳಿತವೆ!
ಈ ಬಗ್ಗೆ ಟ್ವೀಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ವಿರೋಧ ಪಕ್ಷಗಳು ನಮ್ಮ ಗೃಹಲಕ್ಷ್ಮಿ ಯೋಜನೆಯಿಂದ ಅತ್ತೆ, ಸೊಸೆ ನಡುವೆ ಜಗಳ ಉಂಟಾಗುತ್ತದೆ ಎಂದು ಟೀಕೆ ಮಾಡಿದ್ದರು. ಆದರೆ ವಾಸ್ತವವೇ ಬೇರೆ. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಹಾಗೂ ಸೊಸೆ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2000 ರೂ. ಹಣವನ್ನು ಕೂಡಿಟ್ಟು ಕೊಳವೆ ಬಾವಿ ಕೊರೆಸಿದ್ದಾರೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎನ್ನುವುದಕ್ಕೆ ಇದೊಂದು ನಿದರ್ಶನವಾಗಿದೆ. ನಮ್ಮ ದೃಢಸಂಕಲ್ಪ ಜನಪರವಾಗಿದ್ದು, ಗ್ಯಾರಂಟಿಗಳಿಂದ ಜನರಿಗೆ ಹೆಚ್ಚು ಅನುಕೂಲವಾಗಿದೆ ಎನ್ನುವ ಸಾರ್ಥಕತೆ ಇದೆ ಎಂದು ಹೇಳಿದ್ದಾರೆ.