ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಇಂದು ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಹುಬ್ಬಳ್ಳಿಯ ಉಣಕಲ್ ನಿವಾಸಿ ಶಂಕರ ಚವ್ಹಾಣ್ (29) ಮೃತ ಮಾಲಾಧಾರಿ.
ಬಾಲ್ಯದಲ್ಲೇ ತಂದೆ-ತಾಯಿಯನ್ನು ಕಳೆದುಕೊಂಡು ದೊಡ್ಡಮ್ಮನ ಮನೆಯಲ್ಲಿ ಬೆಳೆದಿದ್ದ ಇವರು ಅಯ್ಯಪ್ಪನ ವೃತ ಮಾಡಲು ಮೊದಲ ಬಾರಿಗೆ ಮಾಲೆ ಹಾಕಿದ್ದರು. ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇವರು ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ. ಕಳೆದ ಏಳು ದಿನಗಳಿಂದ ಕೆಎಂಸಿಆಎರ್ಐನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಗಾಯಗೊಂಡ 9 ಜನರಲ್ಲಿ ಸದ್ಯಕ್ಕೆ ಐವರು ಮೃತಪಟ್ಟಿದ್ದಾರೆ. ಇನ್ನುಳಿದ 4 ಜನರಿಗೆ ಚಿಕಿತ್ಸೆ ಮುಂದುವರೆದಿದ್ದು, ಅವರಲ್ಲಿ ಮೂವರ ಸ್ಥಿತಿ ಇನ್ನೂ ಗಂಭೀರವಾಗಿದೆ. ಓರ್ವರಲ್ಲಿ ಚೇತರಿಕೆ ಕಂಡು ಬಂದಿದೆ.
ಪ್ರಕರಣದ ಹಿನ್ನೆಲೆ: ಡಿಸೆಂಬರ್ 23ರಂದು ಬೆಳಗ್ಗಿನ ಜಾವ ಹುಬ್ಬಳ್ಳಿಯ ಉಣಕಲ್ ಅಚ್ಚವ್ವ ಕಾಲೊನಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿತ್ತು. ಎಂದಿನಂತೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ತಮ್ಮ ವ್ರತವನ್ನು ಮುಗಿಸಿ, ಅಯ್ಯಪ್ಪನಿಗೆ ಪೂಜೆ ಸಲ್ಲಿಸಿ ನಿದ್ರೆಗೆ ಜಾರಿದ್ದರು. ಈ ಸಂದರ್ಭದಲ್ಲಿ ಓರ್ವ ಅಯ್ಯಪ್ಪ ಮಾಲಾಧಾರಿಯ ಕಾಲು ಗ್ಯಾಸ್ ಸಿಲಿಂಡರ್ಗೆ ತಾಗಿದ ಪರಿಣಾಮ ಗ್ಯಾಸ್ ಸೋರಿಕೆಯಾಗಿದೆ. ದೇವರಿಗೆ ಹಚ್ಚಿದ್ದ ದೀಪ ಉರಿಯುತ್ತಿದ್ದರಿಂದ ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ 9 ಜನ ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳು ತಕ್ಷಣವೇ ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದರು.
Laxmi News 24×7