ಬೆಂಗಳೂರು : ಪ್ರತಿ ವರ್ಷ ಕೊಡಮಾಡುವಂತ ಬೆಂಗಳೂರು ಪ್ರೆಸ್ ಕ್ಲಬ್ 2024ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿಗೆ ಸಚಿವ ಎಂ. ಬಿ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ. ಜನವರಿ 12ರಂದು ನಡೆಯುವಂತಹ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ. ಕೆ ಶಿವಕುಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಈ ಕುರಿತಂತೆ ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಆರ್. ಶ್ರೀಧರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪತ್ರಿಕೋದ್ಯಮದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ಪತ್ರಕರ್ತರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಬೆಂಗಳೂರು ಪ್ರೆಸ್‌ಕ್ಲಬ್ ಪ್ರತಿ ವರ್ಷ ನೀಡುವ ಪ್ರೆಸ್ ಕ್ಲಬ್ ‘ವರ್ಷದ ವ್ಯಕ್ತಿ ಪ್ರಶಸ್ತಿ’, ‘ವಿಶೇಷ ಪ್ರಶಸ್ತಿ’ ಮತ್ತು ‘ವಾರ್ಷಿಕ ಪ್ರಶಸ್ತಿ’ ಗಳನ್ನು ಜನವರಿ 12 ರಂದು ಪ್ರದಾನ ಮಾಡಲಾಗುವುದು ಎಂದಿದ್ದಾರೆ.
ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಈ ಬಾರಿ 50 ಸಾಧಕ ಪತ್ರಕರ್ತರನ್ನು ಗುರುತಿಸಲಾಗಿದೆ. ಇದರ ಜೊತೆಗೆ ಪ್ರೆಸ್‌ಕ್ಲಬ್ ಸುವರ್ಣ ಮಹೋತ್ಸವ ಪ್ರಶಸ್ತಿ ಘೋಷಿಸಿದ್ದು, ಐವರು ಹಿರಿಯ ಪತ್ರಕರ್ತರು ಹಾಗೂ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲು ಪ್ರೆಸ್‌ಕ್ಲಬ್ ಕಾರ್ಯಕಾರಿ ಸಮಿತಿ ತೀರ್ಮಾನ ಕೈಗೊಂಡಿದೆ ಎಂದಿದ್ದಾರೆ.
ಪ್ರೆಸ್ ಕ್ಲಬ್ ಆವರಣದಲ್ಲಿ ಜನವರಿ 12 ರಂದು ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಹಾಗೂ ಅನೇಕ ಸಚಿವರು ಸೇರಿದಂತೆ ಹಲವಾರು ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.