ಬೆಂಗಳೂರು: ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಇಲಾಖಾ ತನಿಖೆ ರದ್ದಾದರೂ, ಆರೋಪಿ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದಾಗದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಸುಮಾರು 103 ಎಕರೆ ಅರಣ್ಯ ಭೂಮಿಯ ಪೋಡಿಗೆ ಶಿಫಾರಸು ಮಾಡಿದ್ದ ಭೂ ದಾಖಲೆಗಳ ಜಂಟಿ ನಿರ್ದೇಶಕರ ವಿರುದ್ಧದ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ.
ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ಜಂಟಿ ನಿರ್ದೇಶಕ ಇ.ಪ್ರಕಾಶ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುರುವಾರ ನ್ಯಾಯಮೂರ್ತಿ ಕೆ.ನಟರಾಜನ್ ಕೈಗೊಂಡರು.
ಪೋಡಿ ದುರಸ್ತಿಗೆ ಶಿಫಾರಸು ಮಾಡಿರುವ ಬಹುತೇಕ ಅರ್ಜಿಗಳಲ್ಲಿ ಅರ್ಜಿದಾರರು ಸಹಿ ಮಾಡಿರುವುದು ದಾಖಲೆಗಳಿಂದ ಗೊತ್ತಾಗುತ್ತದೆ. ಈ ದಾಖಲೆಗಳು ಕುರಿತು ವಿಚಾರಣೆ ನಡೆಯದೇ ಅವುಗಳ ಸತ್ಯಾಂಶವನ್ನು ಪತ್ತೆ ಹಚ್ಚಲಾಗುವುದಿಲ್ಲ. ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದಾರೆ. ಅರ್ಜಿದಾರರ ವಿರುದ್ಧ ಇಲಾಖಾ ತನಿಖೆಯನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ(ಕೆಎಟಿ) ರದ್ದುಪಡಿಸಿದೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದಾರೆ.
ಆದರೆ, ತಾಂತ್ರಿಕ ಕಾರಣಗಳಿಂದ ಕೆಎಟಿ ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಪಡಿಸಿದೆ. ಅಲ್ಲದೆ, ಅರ್ಜಿದಾರರು, ಭೂ ದಾಖಲೆಗಳ ಜಂಟಿ ನಿರ್ದೇಶಕರಾಗಿದ್ದು, ದಾಖಲೆಗಳನ್ನು ಸರಿಯಾಗಿ ಪರಿಶೀಲನೆ ನಡೆಸದೆ 103 ಎಕರೆ ಹೆಚ್ಚುವರಿ ಭೂಮಿಯನ್ನು ಪೋಡಿ ಮಾಡುವುದಕ್ಕೆ ಶಿಫಾರಸು ಮಾಡಿರುವ ಆರೋಪವಿದೆ. ಹೀಗಾಗಿ ಇಲಾಖಾ ತನಿಖೆ ರದ್ದಾಗಿದ್ದರೂ ಪ್ರಕರಣ ರದ್ದುಪಡಿಸಲಾಗದು ಎಂದು ನ್ಯಾಯಪೀಠ ತನ್ನ ಆದೇಶಲ್ಲಿ ತಿಳಿಸಿದೆ.