ಕೊಪ್ಪಳ : ಕೊಪ್ಪಳದಲ್ಲಿ ಅಣು ಸ್ಥಾವರ ನಿರ್ಮಾಣ ಪ್ರಸ್ತಾವನೆ ಇಲ್ಲ. ಕೇವಲ ಸರ್ವೇ ಮಾಡಿದ ಮಾತ್ರಕ್ಕೆ ಇಲ್ಲಿ ಅಣುಸ್ಥಾವರ ನಿರ್ಮಾಣವಾಗದು. ಅದಕ್ಕೆ ಪೂರಕವಾದ ಜಾಗವನ್ನ ಹುಡುಕುವ ಪ್ರಕ್ರಿಯೆ ನಡೆದಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ಅನುದಾನದ ಕೊರತೆ ಇಲ್ಲ. ರಸ್ತೆಗಳ ಅಭಿವೃದ್ಧಿಗೆ ಪ್ರತಿ ಕ್ಷೇತ್ರಕ್ಕೆ ಕೆಕೆಆರ್ಡಿಬಿಯಿಂದ 10 ಕೋಟಿ ರೂ. ಲೋಕೋಪಯೋಗಿ ಇಲಾಖೆಯಿಂದ 25 ಕೋಟಿ ರೂ. ಅನುದಾನ ಬಂದಿದೆ. ಆದಷ್ಟು ಶೀಘ್ರವಾಗಿ ಎಲ್ಲ ರಸ್ತೆಗಳು ನಿರ್ಮಾಣವಾಗಲಿವೆ ಎಂದು ಹೇಳಿದರು.
ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಕ್ರಮ : ಜಿಲ್ಲೆಯಲ್ಲಿ ಕಳೆದ ವರ್ಷ ಎಸ್ಎಸ್ಎಲ್ಸಿ ಫಲಿತಾಂಶ ಗಣನೀಯವಾಗಿ ಕುಸಿದಿದೆ. ಈ ವರ್ಷ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಜ.31ರಂದು ಶಿಕ್ಷಣಾಧಿಕಾರಿಗಳು, ಎಲ್ಲ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆ ಕರೆದು ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ಮುಂಬರುವ ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯುವಂತಾಗಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
Laxmi News 24×7