ರಾಮನಗರ : ಮತದಾರರು ಈ ಜಿಲ್ಲೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಿ ಸರ್ಕಾರಕ್ಕೆ ಶಕ್ತಿ ನೀಡಿದ್ದು, ಮುಂದಿನ ಮೂರು ವರ್ಷಗಳಲ್ಲಿ ಎಲ್ಲಾ ನಾಯಕರು ಸೇರಿ ಚನ್ನಪಟ್ಟಣ ಹಾಗೂ ಇಡೀ ಜಿಲ್ಲೆಯ ಚಿತ್ರಣ ಬದಲಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ತಿಳಿಸಿದರು.
ಭಾನುವಾರ ಚನ್ನಪಟ್ಟಣದಲ್ಲಿ ನಡೆದ ಕೃತಜ್ಞತಾ ಸಮಾವೇಶದಲ್ಲಿ ಅವರು ಮಾತನಾಡಿದರು. ಇದು ಋಣ ತೀರಿಸುವ ಕಾರ್ಯಕ್ರಮ. ನೀವು ನಮಗೆ ಕೊಟ್ಟ ಶಕ್ತಿಗೆ ಅಭಿನಂದನೆ ಸಲ್ಲಿಸಲು ಈ ಕಾರ್ಯಕ್ರಮ ಮಾಡಿದ್ದೇವೆ. ಬೆಳಗಾವಿ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು 2 ಬಾರಿ ಮುಂದೂಡಲಾಗಿತ್ತು. ಇಂದು ಬೆಳಗ್ಗೆ ಮುಖ್ಯಮಂತ್ರಿಗಳ ಕಾಲಿಗೆ ಪೆಟ್ಟಾಗಿದ್ದು, ವೈದ್ಯರ ಸಲಹೆ ಮೇರೆಗೆ ಅವರು ಈ ಕಾರ್ಯಕ್ರಮಕ್ಕೆ ಆಗಮಿಸಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು.
ಈ ಚುನಾವಣೆಯಲ್ಲಿ ಹಗಲು ರಾತ್ರಿ ಶ್ರಮಿಸಿದ ಎಲ್ಲಾ ನಾಯಕರು, ಮಂತ್ರಿಗಳು, ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನೀವು ಅಭಿವೃದ್ಧಿಗೆ ಮತ ಕೊಟ್ಟಿದ್ದೀರಿ. ನಾನು 1989ರಿಂದ ಈ ಜಿಲ್ಲೆಯ ಶಾಸಕನಾಗಿ ಕೆಲಸ ಮಾಡುತ್ತಿದ್ದೇನೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷಕ್ಕೆ ನಾಲ್ಕು ಸ್ಥಾನಗಳನ್ನು ಗೆಲ್ಲಿಸಿದ್ದೀರಿ ಎಂದರು.
ನಮ್ಮನ್ನು ಟೀಕಿಸಿದವರಿಗೆ ತಕ್ಕ ಉತ್ತರ – ನಾನು ಯಾರನ್ನೂ ಟೀಕಿಸುವ ಅಗತ್ಯವಿಲ್ಲ. ನಮ್ಮನ್ನು ಅಪೂರ್ವ ಸಹೋದರರು ಎಂದವರು, ನಮ್ಮ ಬಗ್ಗೆ ತುಚ್ಛವಾಗಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು, ಮಾಜಿ ಸಿಎಂಗಳಾದ ಹೆಚ್ ಡಿ ಕುಮಾರಸ್ವಾಮಿ, ಬಿ ಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿ ಹಾಗೂ ದಳದ ಎಲ್ಲ ನಾಯಕರಿಗೆ ಇದು ತಕ್ಕ ಉತ್ತರವಾಗಿದೆ. ನೀವು ಕೇವಲ ಚನ್ನಪಟ್ಟಣಕ್ಕೆ ಮಾತ್ರ ಉತ್ತರ ನೀಡಿಲ್ಲ, ಇಡೀ ದೇಶಕ್ಕೆ ಸಂದೇಶ ರವಾನಿಸಿದ್ದೀರಿ. ನಮ್ಮ ಅಧಿಕಾರ ನಶ್ವರ, ನಾವು ಮಾಡುವ ಸಾಧನೆ ಅಜರಾಮರ, ಮತದಾರರೇ ಈಶ್ವರ” ಎಂದು ಡಿಕೆಶಿ ಹೊಗಳಿದರು.
Laxmi News 24×7