ಬೆಳಗಾವಿ: ಹಿಡಕಲ್ ಜಲಾಶಯದ ನೀರನ್ನು ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಒದಗಿಸುವ ವಿಚಾರಕ್ಕೆ ಬೆಳಗಾವಿ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸೋಮವಾರ ವಿವಿಧ ಸಂಘ-ಸಂಸ್ಥೆಗಳು ಪ್ರತಿಭಟನೆ ನಡೆಸಿ, ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಘಟಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ, ಬೆಳಗಾವಿ ಜನರ ಜೀವನಾಡಿ ಹಿಡಕಲ್ ಜಲಾಶಯದಿಂದ 0.5 ಟಿಎಂಸಿ ನೀರನ್ನು ಯಾವುದೇ ಕಾರಣಕ್ಕೂ ಹುಬ್ಬಳ್ಳಿ-ಧಾರವಾಡ ಕೈಗಾರಿಕೆಗೆ ಬಿಡಬಾರದು ಎಂದು ಒತ್ತಾಯಿಸಿ, ಜಿಲ್ಲೆಯ ವಿವಿಧ ಮಠಾಧೀಶರು, ಮೌಲ್ವಿಗಳು, ಚರ್ಚ್ ಮುಖ್ಯಸ್ಥರು, ಕೈಗಾರಿಕೋದ್ಯಮಿಗಳು, ಕನ್ನಡ ಪರ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರು,
ದಲಿತ ಸಂಘಟನೆಗಳು, ಎಂಇಎಸ್ ಸಂಘಟನೆ, ಬೆಳಗಾವಿ ನವೋದ್ಯಮಗಳ ಒಕ್ಕೂಟ, ರೈತ ಸಂಘಟನೆಗಳು, ಬೆಳಗಾವಿ ಬಾರ್ ಅಸೋಸಿಯೇಷನ್, ಪರಿಸರವಾದಿಗಳು ಪ್ರತಿಭಟನೆ ನಡೆಸಿದರು.ಕೆಐಎಡಿಬಿ ರೂಪಿಸಿರುವ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಹೋರಾಟಗಾರರು, ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಪೊಲೀಸರು ತಡೆದ ಕಾರಣಕ್ಕೆ ಜಿಲ್ಲಾಧಿಕಾರಿ ಕೊಠಡಿ ಎದುರೇ ಧರಣಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು.