ಬೆಂಗಳೂರು : “ಸರ್ಕಾರದ ವಿವಿಧ ಯೋಜನೆಗಳ ಮೂಲಕ ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚುವ ಕಾರ್ಯಕ್ರಮ ರೂಪಿಸಲಾಗುವುದು. ಈ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಕರ್ನಾಟಕ ಮಾಧ್ಯಮ ಅಕಾಡೆಮಿ 2023 ಮತ್ತು 2024ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
“ನಮ್ಮ ಸರ್ಕಾರ ಪತ್ರಕರ್ತರಿಗೆ ನೀಡಿರುವ ಯೋಜನೆಗಳ ಬಗ್ಗೆ ಈಗಾಗಲೇ ಪ್ರಸ್ತಾಪ ಮಾಡಲಾಗಿದೆ. ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ವಿತರಣೆ ಮಾಡಲಾಗಿದೆ. ಪತ್ರಕರ್ತರಿಗೆ ಆರೋಗ್ಯ ವಿಮೆ ನೀಡಲು ಚರ್ಚೆ ನಡೆಯುತ್ತಿದೆ.
ಗ್ರಾಮೀಣ ಹಾಗೂ ನಗರ ಭಾಗದ ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ನೀಡುವ ಬಗ್ಗೆ ಆಲೋಚನೆ ಮಾಡಲಾಗುತ್ತಿದೆ. ಪತ್ರಕರ್ತರು ಗೌರವಯುತವಾಗಿ ಬದುಕಲು ಈ ಕ್ರಮ ಕೈಗೊಳ್ಳಲಾಗುವುದು. ನಿವೇಶನ ಹಂಚಿಕೆ ಸಂದರ್ಭದಲ್ಲಿ ಬೇರೆಯವರಿಗೆ ನೀಡುವಂತೆ ಮಾಧ್ಯಮದವರಿಗೂ ಆದ್ಯತೆ ನೀಡಲು ಚರ್ಚೆ ಮಾಡುತ್ತಿದ್ದೇವೆ.
ಮುಂದಿನ ದಿನಗಳಲ್ಲಿ ಇದನ್ನು ಘೋಷಣೆ ಮಾಡುತ್ತೇವೆ. ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿ, ವಿವಿಧ ಯೋಜನಾ ಪ್ರಾಧಿಕಾರದ ಜವಾಬ್ದಾರಿ ವಹಿಸಿಕೊಂಡವನಾಗಿ ನಾನು ಈ ಭರವಸೆ ನೀಡುತ್ತಿದ್ದೇನೆ” ಎಂದು ತಿಳಿಸಿದರು.