ಬೆಳಗಾವಿ: ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆಬ್ರವರಿ 15ರಿಂದ ಸ್ಥಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆ ಹಿನ್ನೆಲೆಯಲ್ಲಿ ಕೈಬಿಟ್ಟು, ಮಾರ್ಚ್ 1ರವರೆಗೂ ನೀರು ಬಿಡುವಂತೆ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶಿಸಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 15ರಂದು ನಡೆದ ಸಭೆಯಲ್ಲಿ ಶಾಸಕರುಗಳು, ಮಹಾಮಂಡಳದ ಅಧ್ಯಕ್ಷರು, ರೈತರು, ಮುಖಂಡರೊಂದಿಗೆ ಚರ್ಚಿಸಿ, ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಪ್ರಸಕ್ತ 2024-25ನೇ ಸಾಲಿನಲ್ಲಿ ಮುಂಗಾರು ಹಂಗಾಮಿಗಾಗಿ 14.87 ಟಿಎಂಸಿ ಹಾಗೂ ಹಿಂಗಾರು ಹಂಗಾಮಿಗೆ 16 ಟಿಎಂಸಿ ಸೇರಿ ಒಟ್ಟಾರೆ 30.842 ಟಿಎಂಸಿ ನೀರನ್ನು ಮಲಪ್ರಭಾ ಜಲಾಶಯದಿಂದ ನೀರಾವರಿಗಾಗಿ ಒದಗಿಸಲಾಗಿದೆ. ಅದರಂತೆ ಮಲಪ್ರಭಾ ಜಲಾಶಯದಿಂದ ನೀರಾವರಿಗಾಗಿ ಒಳಪಡುವ ಕಾಲುವೆಗಳ ಮುಖಾಂತರ ಫೆಬ್ರವರಿ 14ರವರೆಗೆ 16 ಟಿಎಂಸಿ ನೀರನ್ನು ನೀರಾವರಿ ಉದ್ದೇಶಕ್ಕೆ ರೈತರಿಗೆ ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ.
ಮಾರ್ಚ್ 1ರ ವರೆಗೆ ನೀರಾವರಿ ಕಾಲುವೆಗಳಿಗೆ ನೀರು: ಪ್ರಸ್ತುತ ಎರಡೂ ಹಂಗಾಮುಗಳು ಮುಗಿದಿದ್ದರೂ ಸಹ, ನರಗುಂದ ಹಾಗೂ ಬಾದಾಮಿ ಶಾಸಕರು ಹಾಗೂ ರೈತ ಮುಖಂಡರು ನೀರನ್ನು ಕಾಲುವೆಗಳಿಗೆ ಮಾರ್ಚ್ 15ರವರೆಗೆ ಮುಂದುವರೆಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಲ್ಲಿ ಮನವಿ ಮಾಡಿದ್ದಾರೆ. ಆ ಹಿನ್ನೆಲೆಯಲ್ಲಿ ರೈತರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಫೆಬ್ರವರಿ 15ಕ್ಕೆ ಸ್ಥಗಿತಗೊಳಿಸಬೇಕಾಗಿದ್ದ ನೀರನ್ನು ಮಾರ್ಚ್ 1ರ ವರೆಗೆ ನೀರಾವರಿ ಕಾಲುವೆಗಳ ಮುಖಾಂತರ ಹರಿಸುವುದನ್ನು ಮುಂದುವರೆಸಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
Laxmi News 24×7