ಮಂಗಳೂರು: ಮಂಗಳೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 75 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು ಎಂಡಿಎಂಎ ವಶಕ್ಕೆ ಪಡೆದಿದ್ದಾರೆ. ರಾಜ್ಯ ಪೊಲೀಸ್ ಇತಿಹಾಸದಲ್ಲೇ ಗರಿಷ್ಠ ಪ್ರಮಾಣದ ಮಾದಕ ವಸ್ತು ವಶಕ್ಕೆ ಪಡೆದ ಕಾರ್ಯಾಚರಣೆ ಇದಾಗಿದೆ.
ಈ ಕಾರ್ಯಾಚರಣೆಯಲ್ಲಿ ದೇಶಾದ್ಯಂತ ಎಂಡಿಎಂಎ ಮಾರಾಟ ಮಾಡುತ್ತಿದ್ದ ದಕ್ಷಿಣ ಆಫ್ರಿಕಾದ ಮಹಿಳಾ ಪ್ರಜೆಗಳಿಬ್ಬರನ್ನು ಬಂಧಿಸಲಾಗಿದೆ. ಬೆಂಬಾ ಫೆಂಟಾ ಅಲಿಯಾಸ್ ಅಡೋನಿಸ್ (31) ಮತ್ತು ಅಬಿಗಾಲಿ ಅಡೋನಿಸ್ (30) ಬಂಧಿತರು.ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮಂಗಳೂರು ನಗರ ಸೇರಿ ರಾಜ್ಯಕ್ಕೆ ಹಾಗೂ ಇತರ ರಾಜ್ಯಗಳಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ದಕ್ಷಿಣ ಆಫ್ರಿಕಾದ ಮಹಿಳಾ ಪ್ರಜೆಗಳಿಬ್ಬರನ್ನು ಬಂಧಿಸಿ, 75 ಕೋಟಿ ಮೌಲ್ಯದ 37.870 ಕೆ.ಜಿ ನಿಷೇಧಿತ ಮಾದಕ ವಸ್ತು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
“2024ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪಂಪ್‌ವೆಲ್ ಬಳಿಯ ಲಾಡ್ಜ್‌ವೊಂದರಲ್ಲಿ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿ ಹೈದರ್ ಯಾನೆ ಹೈದರ್ ಅಲಿ ಎಂಬಾತನನ್ನು ಬಂಧಿಸಿ 15 ಗ್ರಾಂ MDMA ವಶಪಡಿಸಿಕೊಂಡು ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾದ ಪ್ರಮುಖ ಡ್ರಗ್ ಪೆಡ್ಲರ್ಗಳನ್ನು ಪತ್ತೆ ಹಚ್ಚುವ ಸಲುವಾಗಿ ಪ್ರಕರಣದ ತನಿಖೆಯನ್ನು ಮಂಗಳೂರು ಸಿಸಿಬಿ ಘಟಕಕ್ಕೆ ವರ್ಗಾಯಿಸಲಾಗಿತ್ತು. ಮಂಗಳೂರು ಸಿಸಿಬಿ ಪೊಲೀಸರು ತನಿಖೆ ಕೈಗೊಂಡು ಪ್ರಕರಣದಲ್ಲಿ ಹೈದರ್ ಅಲಿ ಮತ್ತು ಇನ್ನಿತರ ವ್ಯಕ್ತಿಗಳಿಗೆ ಮಾದಕ ವಸ್ತುವನ್ನು ಪೂರೈಕೆ ಮಾಡುತ್ತಿದ್ದ ಪ್ರಮುಖ ಡ್ರಗ್ ಪೆಡ್ಲರ್ ಬೆಂಗಳೂರಿನಲ್ಲಿ ವಾಸ್ತವ್ಯವಿದ್ದ ನೈಜೀರಿಯಾ ದೇಶದ ವಿದೇಶಿ ಪ್ರಜೆ ಪೀಟರ್ ಎಂಬಾತನನ್ನು ಬಂಧಿಸಿ ಆತನಿಂದ 6.248 ಕೆ.ಜಿ MDMAಯನ್ನು ಈ ಹಿಂದೆ ವಶಪಡಿಸಿಕೊಳ್ಳಲಾಗಿತ್ತು” ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
Laxmi News 24×7