ಬೆಳಗಾವಿ : ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆ ಜಾರಿಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸವದತ್ತಿ ತಾಲೂಕಿನಲ್ಲಿ ಇಂದು ಬೃಹತ್ ಆರೋಗ್ಯ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಈಗಾಗಲೇ ಗೃಹ ಆರೋಗ್ಯ ಯೋಜನೆಯನ್ನು ಕೋಲಾರ ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿದ್ದು, ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಬೆಳಗಾವಿ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗೃಹ ಆರೋಗ್ಯ ಯೋಜನೆ ಜಾರಿಯಾಗಲಿದೆ. ನಮ್ಮ ಜನರು ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದರು.
ಜನರ ಮನೆ ಬಾಗಿಲಿಗೆ ಆರೋಗ್ಯ ಸಿಬ್ಬಂದಿ ಭೇಟಿ ನೀಡಿ, ರಕ್ತದೊತ್ತಡ, ಮಧುಮೇಹ, ಕ್ಯಾನ್ಸರ್ ಸೇರಿದಂತೆ ಮಾನಸಿಕ ಕಾಯಿಲೆಗಳ ಬಗ್ಗೆ ತಪಾಸಣೆ ನಡೆಸಲಿದ್ದಾರೆ. ಗ್ರಾಮೀಣ ಭಾಗದ ಜನರ ಆರೋಗ್ಯ ರಕ್ಷಣೆಯಲ್ಲಿ ಗೃಹ ಆರೋಗ್ಯ ಯೋಜನೆ ದೊಡ್ಡ ಬದಲಾವಣೆಯನ್ನ ತರುವ ನಿರೀಕ್ಷೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಹಳ್ಳಿಗಾಡಿನ ಜನರು ಬಡವರು, ತಮ್ಮ ಆರೋಗ್ಯ ತಪಾಸಣೆ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಬಾರದು. ರಕ್ತದೊತ್ತಡ, ಮಧುಮೇಹದಂತಹ ಕಾಯಿಲೆಗಳ ವಿಚಾರದಲ್ಲಿ ನಮ್ಮ ಜನರು ಎಚ್ಚರಿಕೆ ವಹಿಸುವ ಅಗತ್ಯತೆ ಇದೆ. ಆರಂಭಿಕ ಹಂತದಲ್ಲಿ ಈ ಕಾಯಿಲೆಗಳನ್ನ ಪತ್ತೆ ಹಚ್ಚಿದರೆ ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ. ಅಲ್ಲದೇ ಮುಂದೆ ಈ ಕಾಯಿಲೆಗಳಿಂದ ಎದುರಾಗುವ ಆಪತ್ತುಗಳಿಂದ ಬಡ ಜನರನ್ನು ಪಾರು ಮಾಡಬಹುದಾಗಿದೆ. ಹೀಗಾಗಿಯೇ ನಮ್ಮ ಕಾಂಗ್ರೆಸ್ ಸರ್ಕಾರ ಗೃಹ ಆರೋಗ್ಯ ಯೋಜನೆ ಜಾರಿಗೆ ತಂದಿದೆ. 30 ವರ್ಷ ಮೇಲ್ಪಟ್ಟ ರಾಜ್ಯದ ಎಲ್ಲ ಜನರನ್ನು ತಪಾಸಣೆಗೆ ಒಳಪಡಿಸಿ, ಉಚಿತವಾಗಿ ಔಷಧಿಗಳನ್ನು ಜನರ ಬಳಿಗೆ ಒದಗಿಸುವ ಯೋಜನೆ ಇದಾಗಿದೆ ಎಂದು ಹೇಳಿದರು
Laxmi News 24×7