ಬೆಂಗಳೂರು,ಡಿ.14- ಯಾವುದೇ ಕಾರಣಕ್ಕೂ ಸಾರಿಗೆ ನೌಕರರನ್ನು ಸದ್ಯದ ಪರಿಸ್ಥಿತಿಯಲ್ಲಿ ಸರ್ಕಾರಿ ನೌಕರರು ಎಂದು ಪರಿಗಣಿಸಲು ಸಾಧ್ಯವೇ ಇಲ್ಲ. ಉಳಿದ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಸಿದ್ದವಿದೆ ಎಂದು ಉಪಮುಖ್ಯಮಂತ್ರಿಯೂ ಆಗಿರುವ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದರು.
ಮುಖ್ಯಮಂತ್ರಿ ಯಡಿಯೂರಪ್ಪನವರ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲದ ಕಾರಣ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ನೌಕರರು 10 ಬೇಡಿಕೆಗಳನ್ನು ಮುಂದಿಟ್ಟಿದ್ದರು. ಅದರಲ್ಲಿ 9 ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ದವಿದೆ. ಸಾರ್ವಜನಿಕರಿಗೆ ತೊಂದರೆ ಕೊಟ್ಟು ಪ್ರತಿಭಟನೆ ನಡೆಸುವುದು ಸರಿಯಲ್ಲ. ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕೆಂದು ಮನವಿ ಮಾಡಿದರು.
ಸರ್ಕಾರಿ ನೌಕರರನ್ನಾಗಿ ಮಾಡುವುದರಿಂದ ಸರ್ಕಾರಕ್ಕೆ ಬಹಳಷ್ಟು ಹಣಕಾಸಿನ ಸಮಸ್ಯೆ ಎದುರಾಗುತ್ತದೆ. ಇಲಾಖೆಯಲ್ಲಿ 40 ನಿಗಮಗಳಿವೆ. ಇದರಿಂದ ಅಭಿವೃದ್ಧಿ ಕಾರ್ಯ ಕುಂಠಿತವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.