ಬೆಂಗಳೂರು : ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 10 ಲಕ್ಷ ರೂ.ಗಳ ಪರಿಹಾರ ಘೋಷಣೆ ಮಾಡಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡಿಕೊಂಡಿರುವ ಸಿಎಂ, ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ರಾಜ್ಯದ ಪ್ರತಿ ನಾಗರಿಕರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಕರ್ನಾಟಕ ಜಲಸಾರಿಗೆ ಮಂಡಳಿಯ ಸಭೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಇಂದು ಕರ್ನಾಟಕ ಜಲಸಾರಿಗೆ ಮಂಡಳಿಯ ಸಭೆ ನಡೆಯಿತು. ರಾಜ್ಯದ ಬಂದರುಗಳು ಅಭಿವೃದ್ಧಿ, ಜಲಸಾರಿಗೆ ಯೋಜನೆಗಳ ಪ್ರಗತಿ, ಸರಕು ಸಾಗಣೆಗೆ ಅವಶ್ಯವಿರುವ ಮೂಲ ಸೌಲಭ್ಯಗಳ ಬಗ್ಗೆ ಸಮಿತಿಯಲ್ಲಿ ಚರ್ಚಿಸಲಾಯಿತು.

ಮಂಗಳೂರಿನ ಗುರುಪುರ-ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆ ಕಾರ್ಯಗತಗೊಳಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿದರು. ಅಲ್ಲದೇ ಸಾಗರಮಾಲಾ ಯೋಜನೆಯಡಿಯಲ್ಲಿ ಮಂಗಳೂರಿನಲ್ಲಿ ಕರ್ನಾಟಕ ಜಲಸಾರಿಗೆ ತರಬೇತಿ ಕೇಂದ್ರವನ್ನು ಸ್ಥಾಪಿಸುವ ಪ್ರಸ್ತಾವನೆಗೂ ಸಿಎಂ ಒಪ್ಪಿಗೆ ನೀಡಿದರು.