ಬೆಂಗಳೂರು: ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿಯ ಸೋಗಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿದ್ದ ಐಶ್ವರ್ಯಾ ಗೌಡ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಕಾಯಿದೆ (ಪಿಎಂಎಲ್ಎ)ಯಡಿ ಸಮನ್ಸ್ ಜಾರಿ ಮಾಡಿರುವ ಜಾರಿ ನಿರ್ದೇಶನಾಲಯ (ಇ.ಡಿ) ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಏಪ್ರಿಲ್ 24 ಮತ್ತು 25ರಂದು ತಮ್ಮ ವಿರುದ್ಧ ನಡೆಸಿರುವ ಶೋಧ ಕಾರ್ಯಾಚರಣೆ, ಜಪ್ತಿ ಹಾಗೂ ಪಿಎಂಎಲ್ಎ ಕಾಯಿದೆ ಸೆಕ್ಷನ್ 17ರ ಅಡಿ ಹೇಳಿಕೆ ದಾಖಲಿಸಿಕೊಂಡಿರುವುದು ಕಾನೂನುಬಾಹಿರ ಎಂದು ಘೋಷಿಸುವಂತೆ ಕೋರಿ ವಿನಯ್ ಕುಲಕರ್ಣಿ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರಿದ್ದ ರಜಾಕಾಲೀನ ಏಕಸದಸ್ಯ ಪೀಠ ನಡೆಸಿತು.
ವಿಚಾರಣೆ ವೇಳೆ ವಿನಯ್ ಕುಲಕರ್ಣಿ ಪರ ವಕೀಲರು, “ಪಿಎಂಎಲ್ಎ ಅಡಿ ಅಧಿಕಾರ ಹೊಂದಿರುವ ಅಧಿಕಾರಿ ನಮ್ಮ ಕಕ್ಷಿದಾರರಿಗೆ ಸಮನ್ಸ್ ಜಾರಿ ಮಾಡಿಲ್ಲ. ಜಪ್ತಿ ಸಂದರ್ಭದಲ್ಲಿ ವಿನಯ್ ಕುಲಕರ್ಣಿ ಅವರ ಮನೆಯಲ್ಲಿ ಇ.ಡಿ ಅಧಿಕಾರಿಗಳಿಗೆ ಏನೂ ದೊರೆತಿಲ್ಲ. ಹೀಗಿರುವಾಗ ವಿನಯ್ ಕುಲಕರ್ಣಿ ಹೇಳಿಕೆ ದಾಖಲಿಸಿಕೊಳ್ಳುವಂತಿರಲಿಲ್ಲ. ಸಮನ್ಸ್ನಲ್ಲಿ ಮೂಲ ಅಪರಾಧ (ಪ್ರೆಡಿಕೇಟ್ ಅಪರಾಧ) ಯಾವುದು ಎಂದು ಹೇಳಿಲ್ಲ. ಐಶ್ವರ್ಯಾ ಗೌಡ ರಿಮ್ಯಾಂಡ್ ಅರ್ಜಿಯಲ್ಲಿಯೂ ವಿನಯ್ ಕುಲಕರ್ಣಿ ಬಗ್ಗೆ ಯಾವುದೇ ಉಲ್ಲೇಖವಿಲ್ಲ” ಎಂದರು.
ಇದಕ್ಕೆ ಧ್ವನಿಗೂಡಿಸಿದ ಮತ್ತೊಬ್ಬ ವಕೀಲರು, “ಅಪರಾಧ ಪ್ರಕ್ರಿಯೆ ಇಲ್ಲದಿದ್ದರೂ ಪಿಎಂಎಲ್ಎ ಅಡಿ ವಿನಯ್ಗೆ ಸಮನ್ಸ್ ಜಾರಿ ಮಾಡಿರುವುದು ಕಾನೂನುಬಾಹಿರ ಕ್ರಮ” ಎಂದು ವಾದಿಸಿದರು.