ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆಯನ್ನು ವಿರೋಧಿಸಿ ದೆಹಲಿ ಗಡಿ ಭಾಗದ ಹಲವು ರಸ್ತೆಗಳಲ್ಲಿ ಪ್ರತಿಭಟಿಸುತ್ತಿರುವ ರೈತರನ್ನು ಸ್ಥಳಾಂತರಗೊಳಿಸಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ಕುರಿತಾಗಿ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ.
ಅರ್ಜಿ ವಿಚಾರಣೆ ನಡೆಸಿದ ಪೀಠವು,’ಕೃಷಿ ಕಾನೂನು ಸಂಬಂಧಿತ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಮತ್ತು ರೈತ ಪ್ರತಿನಿಧಿಗಳನ್ನೊಳಗೊಂಡ ಸಮಿತಿಯನ್ನು ರೂಪಿಸುವುದಾಗಿ ಹೇಳಿದೆ. ಈ ಪೀಠವು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡಿದೆ.
ಈ ಅರ್ಜಿಯಲ್ಲಿ ಪ್ರತಿಭಟನಾ ನಿರತ ರೈತರನ್ನೂ ಸೇರಿಸಿಕೊಳ್ಳುವಂತೆ ನ್ಯಾಯಾಲಯವು ಅರ್ಜಿದಾರರಿಗೆ ಸೂಚಿಸಿದ್ದು, ಅರ್ಜಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.
ರೈತರೊಂದಿಗಿನ ನಿಮ್ಮ ಸಂಧಾನ ಮಾತುಕತೆ ಈವರೆಗೂ ಸಫಲವಾಗಿಲ್ಲವಲ್ಲ ಎಂದು ಪೀಠವು ಕೇಂದ್ರ ಸರ್ಕಾರಕ್ಕೆ ಕೇಳಿದೆ. ಇದಕ್ಕೆ ಉತ್ತರಿಸಿರುವ ಸಾಲಿಟರ್ ಜನರಲ್ ತುಷಾರ್ ಮೆಹ್ತಾ ಅವರು,’ಸರ್ಕಾರವು ರೈತರ ಹಿತಾಸಕ್ತಿಗೆ ವಿರುದ್ಧವಾಗಿ ಯಾವುದೇ ಕ್ರಮಕೈಗೊಳ್ಳುವುದಿಲ್ಲ’ ಎಂದಿದ್ದಾರೆ.
ದೆಹಲಿ ಗಡಿ ಪ್ರದೇಶದ ರಸ್ತೆಗಳಲ್ಲಿ ರೈತರು ಬೀಡುಬಿಟ್ಟಿರುವ ಕಾರಣ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಅಲ್ಲದೆ ಕೋವಿಡ್ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಗಳಿವೆ. ಹಾಗಾಗಿ ಅಲ್ಲಿಂದ ರೈತರನ್ನು ಸ್ಥಳಾಂತರಗೊಳಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸುಪ್ರೀಂಕೋರ್ಟ್‌ಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.
Laxmi News 24×7