ಬೆಂಗಳೂರು: ಕನ್ನಡ ಭಾಷೆಗೆ ದೀರ್ಘಕಾಲದ ಇತಿಹಾಸವಿದೆ, ಪಾಪ ಕಮಲ್ ಹಾಸನ್ ಅವರಿಗೆ ತಿಳಿದಿರುವಂತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೆಪಿಸಿಸಿಯ ಮಾಜಿ ಸೈನಿಕ ವಿಭಾಗದ ವತಿಯಿಂದ ನಗರದ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಆಯೋಜಿಸಿದ್ದ “ಜೈ ಹಿಂದ್ ಸಭಾ” ಕಾರ್ಯಕ್ರಮದಲ್ಲಿ ಭಾಗಿಯಾಗಿ ತೆರಳುವ ಮುನ್ನ ಅವರು ಮಾತನಾಡಿದರು.
ಕಮಲ್ ಕ್ಷಮೆಯಾಚನೆಗೆ ವಿಜಯೇಂದ್ರ ಒತ್ತಾಯ: ಕಮಲ್ ಹಾಸನ್ ಹೇಳಿಕೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಕ್ಸ್ ಪೋಸ್ಟ್ ಮಾಡಿ, ಮಾತೃಭಾಷೆಯನ್ನು ಪ್ರೀತಿಸಬೇಕು, ಆದರೆ ಅದರ ಹೆಸರಿನಲ್ಲಿ ದುರಭಿಮಾನ ಮೆರೆಯುವುದು ಸಂಸ್ಕೃತಿ ಹೀನ ನಡವಳಿಕೆಯಾಗುತ್ತದೆ. ಅದರಲ್ಲೂ ಕಲಾವಿದರಿಗೆ ಪ್ರತಿಯೊಂದು ಭಾಷೆಯನ್ನೂ ಗೌರವಿಸುವ ಸಂಸ್ಕಾರ ಇರಬೇಕು. ಕನ್ನಡವೂ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ನಟಿಸಿರುವ ನಟ @ikamalhaasan ತಮ್ಮ ತಮಿಳು ಭಾಷೆಯನ್ನು ವೈಭವಿಕರಿಸುವ ಮತ್ತಿನಲ್ಲಿ ನಟ ಶಿವರಾಜ್ ಕುಮಾರ್ ಅವರನ್ನೂ ಕುಳ್ಳಿರಿಸಿಕೊಂಡು ಕನ್ನಡವನ್ನು ಅವಮಾನಿಸಿರುವುದು ಉದ್ಧಟತನ ಹಾಗೂ ದುರಹಂಕಾರದ ಪರಮಾವಧಿಯಾಗಿದೆ ಎಂದಿದ್ದಾರೆ.
ಭಾರತವೂ ಸೇರಿದಂತೆ ವಿಶ್ವದ ಹತ್ತು -ಹಲವು ಕಡೆಗಳಲ್ಲಿ ಕನ್ನಡದ ಹೆಗ್ಗುರುತು ಶತ ಶತಮಾನಗಳಿಂದಲೂ ಪಡಿಮೂಡಿದೆ. ಜಗತ್ತಿನ ಭಾಷೆಗಳಲ್ಲಿ ಕನ್ನಡಕ್ಕೆ ಸರ್ವ ಶ್ರೇಷ್ಠ ಮಾನ್ಯತೆ ಇದೆ ಎಂಬ ಕನಿಷ್ಠ ತಿಳಿವಳಿಕೆ ಕಮಲ್ ಹಾಸನ್ ಅವರಂತಹ ಸಂಕುಚಿತ ವ್ಯಕ್ತಿತ್ವವಿರುವ ದುರಾಭಿಮಾನಿ ವ್ಯಕ್ತಿಗಳಿಗೆ ತಿಳಿದಿರಲಿ. ಕನ್ನಡವನ್ನು ಅವಹೇಳನ ಮಾಡುವ ಮುನ್ನ ಕನ್ನಡ ಚಿತ್ರಗಳಲ್ಲೂ ನಟಿಸಿರುವ ಕಮಲ್ ಹಾಸನ್ ಕನ್ನಡ, ಕನ್ನಡಿಗರ ಋಣ ತಮ್ಮ ಮೇಲಿದೆ ಎಂಬ ಔದಾರ್ಯತೆ ಮರೆದಿದ್ದು ಅವರ ಉಪಕಾರ ಸ್ಮರಣೆಯಿಲ್ಲದ ವ್ಯಕ್ತಿತ್ವವನ್ನು ಅನಾವರಣಗೊಳಿಸಿದೆ ಎಂದು ಕಿಡಿಕಾರಿದ್ದಾರೆ.
ದಕ್ಷಿಣ ಭಾರತದಲ್ಲಿ ಸಾಮರಸ್ಯ ಬೆಸೆಯಬೇಕಾದ ಕಮಲ್ ಹಾಸನ್ ಅವರು ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಹಿಂದೂ ಧರ್ಮವನ್ನು ಅವಹೇಳನ ಮಾಡುತ್ತಾ ಧಾರ್ಮಿಕ ಭಾವನೆಗಳಿಗೆ ದಕ್ಕೆ ತರುತ್ತಿದ್ದರು. ಇದೀಗ ಆರೂವರೆ ಕೋಟಿ ಕನ್ನಡಿಗರ ಸ್ವಾಭಿಮಾನಕ್ಕೆ ಕೊಳ್ಳಿಯಿಟ್ಟು, ಕನ್ನಡವನ್ನು ಅಪಮಾನಿಸಿದ್ದಾರೆ ಎಂದು ಹೇಳಿದ್ದಾರೆ.
Laxmi News 24×7