ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಪ್ರತಿಭಟನೆ: ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು….
ಸಿಎಂ, ಡಿಸಿಎಂ ರಾಜೀನಾಮೆಗೆ ಅಗ್ರಹಿಸಿದ ವಿಜಯೇಂದ್ರ ಹಾಗೂ ಆರ್ ಅಶೋಕ
ಆರ್ಸಿಬಿ ವಿಜಯೋತ್ಸವ ಕಾಲ್ತುಳಿತದಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಇಂದು ಬಿಜೆಪಿ ಪ್ರತಿಭಟನೆ ನಡೆಸಿತು.ಆರ್ಸಿಬಿ ತಂಡ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಮತ್ತು ಮುಖ್ಯಮಂತ್ರಿ, ಡಿಸಿಎಂ ಹಾಗೂ ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ, ನಗರದ ಫ್ರೀಡ್ಂ ಪಾರ್ಕ್ನಲ್ಲಿ ಇಂದು ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು.
ಕಾಂಗ್ರೆಸ್ ಸರ್ಕಾರ ತನ್ನ ಪ್ರಚಾರದ ತೆವಲಿಗೆ ಸರಿಯಾದ ವ್ಯವಸ್ಥೆ ಮಾಡದೇ ಆತುರಾತುರವಾಗಿ ಕಾರ್ಯಕ್ರಮ ಮಾಡಿ ಅಮಾಯಕರ ಬಲಿ ಪಡೆದಿದೆ. ಈ ಸಾವುಗಳ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಒಕ್ಕೊರಲಿನಿಂದ ಆಗ್ರಹಿಸಿದರು.ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದ್ದರು. ಆದರೆ, ಫ್ರೀಡಂ ಪಾರ್ಕ್ನಲ್ಲೇ ಪೊಲೀಸರು, ಬಿಜೆಪಿ ನಾಯಕರನ್ನು ತಡೆದರು.
ಈ ವೇಳೆ ನುಕುನುಗ್ಗಾಟ ನಡೆಯಿತು. ನಂತರ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು, ಬಿಎಂಟಿಸಿ ಬಸ್ಗಳಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಗೆಕರೆದೊಯ್ದರು.ಇದಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಜನಪ್ರಿಯತೆ ನೆಲಕಚ್ಚಿದೆ. ಹಾಗಾಗಿ ಅಗ್ಗದ ಜನಪ್ರಿಯತೆ ಪಡೆಯಲು ಅವಸರದಲ್ಲಿ ಆರ್‌ಸಿಬಿ ಗೆಲುವಿನ ಸಂಭ್ರಮ ಆಯೊಜಿಸಿದ್ದರು. ಒಂದು ವಾರ ಸಮಯ ಕೊಡಿ ಎಂದು ಅಧಿಕಾರಿಗಳು ಸಲಹೆನೀಡಿದರೂ ಕೇಳದೆ ಸಿಎಂ ಹಟ ಹಿಡಿದು ವಿಧಾನಸೌಧದ ಮೆಟ್ಟಿಲು ಮೇಲೆ ಕಾರ್ಯಕ್ರಮ ಆಯೋಜಿಸಿದರು.
ಹಟ್ಟ ಹಿಡಿದ ಡಿಸಿಎಂ ಚೆನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಮಾಡಿದರು. ಇವರು ಜನಪ್ರಿಯತೆ ಪಡೆಯುವ ಹುಚ್ಚಾಟದ ಹಠಕ್ಕೆ 11 ಜನ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಇದು ರಾಜ್ಯ ಸರ್ಕಾರ ಪ್ರಾಯೋಜಿತ ಕೊಲೆ. ನೈತಿಕ ಹೊಣೆ ಹೊತ್ತು ಸಿಎಂ ಡಿಸಿಎಂ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದರು
ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಮಾತನಾಡಿ, 11 ಜನ ಯುವಕರ ಕೊಲೆಯ ಶಾಪ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟುತ್ತಿದೆ. ಆರ್ಸಿಬಿ ಟ್ರೋಫಿ ಗೆದ್ದಿದ್ದು ಕೊಹ್ಲಿ ಮತ್ತು ತಂಡ ಅಧಿಕಾರಿಗಳ ಸಲಹೆ ಧಿಕ್ಕರಿಸಿ ಪ್ರಚಾರದ ತ್ಯವ್ಲಿಗೆ ಕಾರ್ಯಕ್ರಮ ಆಯೋಜಿಸಿದರು ಈಗ ಗೊತ್ತಿಲ್ಲ ಎಂದರೆ ಪರವಾಣಿಗೆ ಕೊಟ್ಟವರು ಯಾರು ಎಂದು ಪ್ರಶ್ನಿಸಿದ ಅವರು, ತಮ್ಮ ತಪ್ಪನ್ನು ಪೊಲೀಸರ ಮೇಲೆ ಹಾಕಿ ಅವರನ್ನು ಅಮಾನತ್ ಮಾಡಿದರು. ಈ ಪ್ರಕರಣದಲ್ಲಿ ಸಿಎಂ ಡಿಸಿಎಂ ಇಬ್ಬರೂ ಅಪರಾಧಿಗಳಾಗಿದ್ದು ತಕ್ಷಣ ರಾಜೀನಾಮೆ ಕೊಡಬೇಕೆಂದು ಅವರು ಆಗ್ವಹಿಸಿದರು
ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ್, ವಿಧಾನಸಭಾ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ಸೇರಿದಂತೆ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
Laxmi News 24×7