ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಐಪಿಎಲ್ ಜಯ ಗಳಿಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ವಿಜಯೋತ್ಸವ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಪ್ರಕರಣದಲ್ಲಿ ಅಮಿಕಸ್ ಕ್ಯೂರಿ (ಕೋರ್ಟ್‌ಗೆ ನೆರವಾಗುವವರು) ಯನ್ನಾಗಿ ಹಿರಿಯ ವಕೀಲರಾದ ಸುಶೀಲಾ ಅವರನ್ನು ನೇಮಕ ಮಾಡಿ ಹೈಕೋರ್ಟ್ ಆದೇಶಿಸಿದೆ.
ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ವರದಿಯನ್ನು ಆಧರಿಸಿ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಅರ್ಜಿಯ ಸಂಬಂಧ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ನ್ಯಾಯಪೀಠ, ಈ ಆದೇಶ ನೀಡಿದೆ.
ಅಲ್ಲದೆ, ವಕೀಲರಾದ ಸುಶೀಲಾ ಅವರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳು ಹಾಗೂ ಅದರ ಕುರಿತ ಎಲ್ಲ ದಾಖಲೆಗಳ ಮತ್ತು ಸರ್ಕಾರ ಈವರೆಗೂ ಸಲ್ಲಿಸಿರುವ ವಸ್ತುಸ್ಥಿತಿ ವರದಿಯನ್ನು ಒದಗಿಸಲು ರಿಜಿಸ್ಟ್ರಾರ್ ಅವರಿಗೆ ಸೂಚನೆ ನೀಡಿ ವಿಚಾರಣೆಯನ್ನು ಮುಂದಿನ ಮಂಗಳವಾರಕ್ಕೆ ಮುಂದೂಡಿತು.
ವಿಚಾರಣೆ ವೇಳೆ ಹಾಜರಿದ್ದ ಮಧ್ಯಂತರ ಅರ್ಜಿ ಸಲ್ಲಿಸಿರುವ ವಕೀಲರು, ಘಟನೆ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿರುವ ಅರ್ಜಿಯನ್ನು ಈ ಅರ್ಜಿಯೊಂದಿಗೆ ವಿಚಾರಣೆ ನಡೆಸಬೇಕು ಎಂದು ಕೋರಿದರು.
ಮತ್ತೊಂದು ಮಧ್ಯಂತರ ಅರ್ಜಿಯ ಪರ ವಕೀಲರು, ಮೃತಪಟ್ಟವರಿಗೆ ಪರಿಹಾರ ಮೊತ್ತವನ್ನು ಹೆಚ್ಚಳ ಮಾಡಬೇಕು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಇದೇ ವೇಳೆ ಮನವಿ ಮಾಡಿದರು.
Laxmi News 24×7