ಬೆಂಗಳೂರು: ಬೆಂಗಳೂರು ಮೆಟ್ರೋ ರೈಲಿನ ಟಿಕೆಟ್ ದರ ಹೆಚ್ಚಳ ಸಂಬಂಧ ನಿವೃತ್ತ ನ್ಯಾಯಮೂರ್ತಿ ತರಿಣಿ ನೇತೃತ್ವದ ದರ ನಿಗದಿ ಸಮಿತಿ ಸಲ್ಲಿಸಿರುವ ವರದಿಯನ್ನು ಬಹಿರಂಗಪಡಿಸಲು ಕೋರಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್, ಕೇಂದ್ರ, ರಾಜ್ಯ ಸರ್ಕಾರ ಮತ್ತು ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್ಸಿಎಲ್)ಕ್ಕೆ ನೋಟಿಸ್ ಜಾರಿ ಮಾಡಿ ಆದೇಶಿಸಿದೆ.
ತೇಜಸ್ವಿ ಸೂರ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀತ್ ದತ್ತ ಯಾದವ್ ಅವರಿದ್ದ ನ್ಯಾಯಪೀಠ, ರಾಜ್ಯ ಸರ್ಕಾರ ಮತ್ತು ಬಿಎಂಆರ್ಸಿಎಲ್ಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರು (ನೀವಿಷ್ಟು) ಪ್ರಬಲರಾಗಿದ್ದೂ ನಿಮಗೆ ವರದಿ ಸಿಗುತ್ತಿಲ್ಲವೇ? ಎಂದು ಪೀಠ ಪ್ರಶ್ನಿಸಿತು. ಇದಕ್ಕೆ ಅರ್ಜಿದಾರರ ಪರ ವಕೀಲರು, ಡಿಸೆಂಬರ್ ತಿಂಗಳಲ್ಲೇ ದರ ನಿಗದಿ ಸಮಿತಿ ವರದಿ ನೀಡಿದೆ. ಆದರೂ ಬಿಎಂಆರ್ಸಿಎಲ್ ವರದಿ ನೀಡುತ್ತಿಲ್ಲ. ಈ ಸಂಬಂಧ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನೂ ಖುದ್ದಾಗಿ ಭೇಟಿ ಮಾಡಿ ಚರ್ಚೆ ಮಾಡಲಾಗಿದೆ. ಆದರೂ, ವರದಿ ಸಿಕ್ಕಿಲ್ಲ. ಸರ್ಕಾರದ ಅನುಮತಿಗಾಗಿ ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಮಾಹಿತಿ ಹಕ್ಕು ಕಾಯಿದೆಯಡಿ ಅರ್ಜಿ ಸಲ್ಲಿಸಿದ್ದರೂ ಸಮಿತಿ ವರದಿ ಬಹಿರಂಗಪಡಿಸಿಲ್ಲ ಎಂದು ಪೀಠಕ್ಕೆ ವಿವರಿಸಿದರು.