ಬೆಂಗಳೂರು: ಶಿವ ಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ಕಿರಣ್ಗೆ ಪೊಲೀಸರು ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಿರುವುದು ಕಂಡುಬಂದ ಹಿನ್ನೆಲೆ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕು. ಮತ್ತು ವರದಿಯೊಂದಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಬೇಕು ಎಂದು ಹೈಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ.
ಪೊಲೀಸರು ವಿಚಾರಣೆ ವೇಳೆ ಹಲ್ಲೆ ನಡೆಸಿ, ಶಾಕ್ ಟ್ರೀಟ್ಮೆಂಟ್ ನೀಡುವ ಮೂಲಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ತನ್ನನ್ನು ಕೂಡಲೇ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶಿಸಬೇಕು ಎಂದು ಕೋರಿ ಕಿರಣ್ (ಪತ್ನಿ ಮೂಲಕ) ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ನ್ಯಾಯಪೀಠ ಈ ನಿರ್ದೇಶನ ನೀಡಿದೆ.
ಕಿರಣ್ ಅವರನ್ನು ಪೊಲೀಸರು ಬೌರಿಂಗ್ ಆಸ್ಪತ್ರೆ ಹೊರತುಪಡಿಸಿ ಇತರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕು. ವೈದ್ಯಕೀಯ ವರದಿ ಪಡೆದು ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಬೇಕು. ನಂತರ ತನ್ನನ್ನು ನ್ಯಾಯಾಂಗ ಬಂಧನದ ಸುಪರ್ದಿಗೆ ನೀಡಬೇಕು ಎಂಬ ಕಿರಣ್ ಮನವಿ ಕುರಿತು ವಾದ-ಪ್ರತಿವಾದ ಆಲಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಸೂಕ್ತ ಆದೇಶ ಹೊರಡಿಸಬೇಕು. ಇನ್ನೂ ಪೊಲೀಸರು ಕಿರಣ್ಗೆ ಯಾವುದೇ ರೀತಿ ಕಿರುಕುಳ ನೀಡಬಾರದು ಎಂದು ನಿರ್ದೇಶಿಸಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.
ಸೋಮವಾರ ಬೆಳಗ್ಗೆ ಕಲಾಪ ಪ್ರಾರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ವಕೀಲರು, ನಮ್ಮ ಕಕ್ಷಿದಾರರು ಸದ್ಯ ಪೊಲೀಸ್ ವಶದಲ್ಲಿದ್ದಾರೆ. ವಿಚಾರಣೆ ವೇಳೆ ಪೊಲೀಸರು ಆತನ ಮೇಲೆ ಹಲ್ಲೆ ನಡೆಸಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಎಲೆಕ್ಟ್ರಿಕಲ್ ಶಾಕ್ ಸೇರಿ ಇನ್ನಿತರ ವಿಧಾನಗಳ ಮೂಲಕ ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಿದ್ದಾರೆ. ಇದರಿಂದ ಕಿರಣ್ ಅನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಕೋರಿ ಅರ್ಜಿ ಸಲ್ಲಿಸಿದ್ದು, ಅದನ್ನು ತುರ್ತು ವಿಚಾರಣೆಗೆ ಪರಿಗಣಿಸಬೇಕು ಎಂದು ಕೋರಿದರು.
Laxmi News 24×7