ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡನೇ ಬಾರಿ ವಜಾಗೊಳಿಸಿ ಆದೇಶಿಸಿದೆ.
ಹಾಸನ ಜಿಲ್ಲೆ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಅರ್ಜಿ ವಜಾಗೊಳಿಸಿ ಆದೇಶಿಸಿದ್ದಾರೆ. ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ. ಈ ಮೊದಲು ಜಾಮೀನು ಕೋರಿ ಪ್ರಜ್ವಲ್ ಎರಡನೇ ಬಾರಿಗೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಮೊದಲು ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಸೂಚನೆ ನೀಡಿತ್ತು.
ಈ ಹಿನ್ನೆಲೆಯಲ್ಲಿ ಪ್ರಜ್ವಲ್ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿರುವ ವಿಶೇಷ ನ್ಯಾಯಾಲಯ ಎರಡನೇ ಬಾರಿ ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿಸಿದೆ.
ಆರೋಪಿ ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು ನಾಲ್ಕು ಅತ್ಯಾಚಾರ ಪ್ರಕರಣ ದಾಖಲಾಗಿವೆ. 2024ರ ಅಕ್ಟೋಬರ್‌ನಲ್ಲಿ ಹೈಕೋರ್ಟ್ ಪ್ರಜ್ವಲ್ ಅವರ ಜಾಮೀನು ಮತ್ತು ಮೂರು ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ಸಹ ಪ್ರಜ್ವಲ್ ಅವರಿಗೆ ಜಾಮೀನು ನಿರಾಕರಿಸಿತ್ತು. ಇದಕ್ಕೂ ಮುನ್ನ, ವಿಶೇಷ ನ್ಯಾಯಾಲಯವು ಜಾಮೀನು ಮತ್ತು ನಿರೀಕ್ಷಣಾ ಜಾಮೀನುಗಳನ್ನು ವಜಾಗೊಳಿಸಿತ್ತು.