ಬೆಂಗಳೂರು, ಡಿ.22- ರಾಜ್ಯದಲ್ಲಿ ಜನವರಿ ಒಂದರಿಂದ ಶಾಲೆ ಪ್ರಾರಂಭಿಸಬೇಕೆ, ಬೇಡವೆ ಎಂಬ ವಿಚಾರ ಕುರಿತು ತಾಂತ್ರಿಕ ಸಲಹಾ ಸಮಿತಿ ವರದಿಯನ್ನು ಕೇಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಾಣು ಹೊಸ ರೂಪಾಂತರ ಪಡೆದಿರುವ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ವರದಿ ಕೇಳಿದ್ದು, ವರದಿ ಬಂದ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಇಂದು ಸಂಜೆ ವೇಳೆಗೆ ವರದಿ ನೀಡುವ ಸಾಧ್ಯತೆ ಇದ್ದು, ಸದ್ಯಕ್ಕೆ ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಮಾಡುವ ಬಗ್ಗೆ ಚಿಂತನೆ ನಡೆಸಿಲ್ಲ. ಆದರೆ, ರಾತ್ರಿ ಕಫ್ರ್ಯೂ ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ನಿನ್ನೆ ರಾತ್ರಿ ಕೇಂದ್ರ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಯೊಂದಿಗೆ ಮಾತನಾಡಿದ್ದು, ಆ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನೈಟ್ ಕಫ್ರ್ಯೂ ವಿಧಿಸಬಹುದೆಂಬ ಸಲಹೆ ಮಾಡಿದ್ದಾರೆ. ಈಗಾಗಲೇ ಕೆಲವು ರಾಜ್ಯಗಳು ಜಾರಿ ಮಾಡಿದ್ದು, ನಮ್ಮ ರಾಜ್ಯದಲ್ಲೂ ಮುಖ್ಯಮಂತ್ರಿಯವರೊಂದಿಗೆ ಸಮಾಲೋಚನೆ ನಡೆಸಿ ತೀರ್ಮಾನ ತೆಗೆದುಕೊಳ್ಳಬಹುದು ಎಂಬ ಸಲಹೆ ನೀಡಿದ್ದಾರೆ ಎಂದರು.
ವಿದೇಶದಿಂದ ಬಂದಿರುವ ಕೊರೊನಾ ನೆಗೆಟಿವ್ ವರದಿ ತರದಿರುವ 138 ಮಂದಿಯನ್ನು ಪತ್ತೆಹಚ್ಚಿ ಕ್ವಾರಂಟೈನ್ ಮಾಡಲಾಗಿದೆ. ಈಗಾಗಲೇ ಆರ್‍ಟಿಪಿಸಿಆರ್ ಪರೀಕ್ಷೆ ಮಾಡಿಸಿದ್ದು, ಸಂಜೆ ವರದಿ ಬರುವ ನಿರೀಕ್ಷೆ ಇದೆ. ಒಂದು ವೇಳೆ ವರದಿಯಲ್ಲಿ ಪಾಸಿಟಿವ್ ಬಂದರೆ ಜೆನೆಸಿಸ್ ಪರೀಕ್ಷೆ ಮಾಡಿ ಆ ವೈರಸ್ ಬಗ್ಗೆ ತಿಳಿದುಕೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.
Laxmi News 24×7