ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿ ಶಾಸಕರ ಒನ್ ಟು ಒನ್ ಸಭೆ ನಡೆಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರ ಜೊತೆ ಸಭೆ ನಡೆಸುತ್ತಿದ್ದಾರೆ.
ವಿಧಾನಸೌಧದಲ್ಲಿರುವ ಸಿಎಂ ಕಚೇರಿಯಲ್ಲಿ ನಡೆಯುತ್ತಿರುವ ಸಭೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಆಹ್ವಾನ ಇಲ್ಲದಿರುವುದು ಕುತೂಹಲ ಮೂಡಿಸಿದೆ. ಮಂಗಳವಾರ ಸಂಜೆ 5:30 ರ ಸುಮಾರಿಗೆ ತಮ್ಮ ಕಚೇರಿಯಲ್ಲಿ ಸಿಎಂ ಸಭೆ ಆರಂಭಿಸಿದ್ದು, ಮೊದಲಿಗೆ ತವರು ಜಿಲ್ಲೆ ಮೈಸೂರಿನ ಜನಪ್ರತಿನಿಧಿಗಳ ಸಭೆ ನಡೆಸಿದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ. ಮಹದೇವಪ್ಪ, ಜಿಲ್ಲೆಯನ್ನು ಪ್ರತಿನಿಧಿಸುವ ಸಚಿವರು ಮತ್ತು ಶಾಸಕರುಗಳ ಜೊತೆ ಸಭೆ ನಡೆಸಿದರು.
ಸಭೆಯಲ್ಲಿ ಚರ್ಚಿಸಲಾದ ವಿಷಯಗಳು: ಜಿಲ್ಲೆಯಲ್ಲಿ ಪ್ರಮುಖವಾಗಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳ ಸ್ಥಿತಿ ಗತಿ, ಕೃಷಿ ಚಟುವಟಿಕೆಗಳು ಮತ್ತು ಬಿಡುಗಡೆಯಾಗಿರುವ ಅನುದಾನದಲ್ಲಿ ಖರ್ಚಾಗಿರುವ ಹಣದ ಪ್ರಮಾಣ, ಕಾಮಗಾರಿ ಪೂರ್ಣಗೊಳಿಸಲು ಕಾಲಾವಧಿ ನಿಗದಿ ಮಾಡುವ ಕುರಿತು ಚರ್ಚೆ ನಡೆಸಿದರು.
ಕ್ಷೇತ್ರವಾರು ಬಿಡುಗಡೆಯಾಗಿರುವ ಅನುದಾನ, ಇಲಾಖಾವಾರು ಅನುದಾನಗಳ ಬಗ್ಗೆ ಚರ್ಚೆಯಾಗಿದೆ. ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳ ಜಾರಿಯ ಸ್ಥಿತಿಗತಿ, ಶಾಸಕರ ಅನುದಾನದಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳು, ಪ್ರಮುಖವಾಗಿ ಕ್ಷೇತ್ರಕ್ಕೆ ಆಗಬೇಕಾದ ಕೆಲಸಗಳಿಗೆ ಪ್ರಸ್ತಾವನೆ ಸಲ್ಲಿಸುವ ಬಗ್ಗೆ ಮುಖ್ಯಮಂತ್ರಿಗಳು ಮಾಹಿತಿ ಪಡೆದು ಸಲಹೆ, ಸೂಚನೆಗಳನ್ನು ನೀಡಿದರು.