ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ರಸ್ತೆಯಲ್ಲಿ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಇಬ್ಬರ ಮೇಲೆ ಚಿರತೆ ದಾಳಿ ಮಾಡಿದೆ. ಸಖರಾಯಪಟ್ಟಣ ಸಮೀಪದ ಮದಗದ ಕೆರೆ ಬಳಿ ಘಟನೆ ನಡೆದಿದೆ. ಮೂರ್ತಣ್ಣ, ಮಂಜಣ್ಣ ಎಂಬಿಬ್ಬರ ಮೇಲೆ ಚಿರತೆ ದಾಳಿ ಮಾಡಿದೆ.
ಹಳ್ಳಿಯಿಂದ ಸಖರಾಯಪಟ್ಟಣಕ್ಕೆ ಬರುವಾಗ ಮಾರ್ಗಮಧ್ಯೆ ಘಟನೆ ನಡೆದಿದೆ. ಮೂರ್ತಣ್ಣನ ಎಡಗೈಯ ಒಂದು ಬೆರಳನ್ನು ಚಿರತೆ ತಿಂದಿದೆ. ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದರು. ರಸ್ತೆಯಲ್ಲಿ ಸಂಚರಿಸುವಾಗ ಸಾರ್ವಜನಿಕರು ಹಾಗೂ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದ್ದಾರೆ.
ಇತ್ತೀಚಿಗೆ ಕಾಡು ಪ್ರಾಣಿಗಳಿಂದ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಮಲೆನಾಡು ಭಾಗದಲ್ಲಿ ಕಾಡಾನೆಗಳ ದಾಳಿಗೆ ಜನ ಜೀವ ತೆರುತ್ತಿರುವ ಬೆನ್ನಲ್ಲೇ ಇದೀಗ ಚಿರತೆ ದಾಳಿಯೂ ಶುರುವಾಗಿದೆ.
ಅದರಲ್ಲೂ ಮೂಡಿಗೆರೆ ತಾಲೂಕು ಹಾಗೂ ಎನ್.ಆರ್.ಪುರ ತಾಲೂಕಿನಲ್ಲಿ ಕಾಡಾನೆ ದಾಳಿಗೆ ರೈತರು ಹಾಗೂ ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ. ಕಳೆದ ವಾರ ಕಾಡಾನೆ ದಾಳಿಗೆ ಇಬ್ಬರು ಪ್ರಾಣ ಕಳೆದುಕೊಂಡಿದ್ದರು. ಇದರಿಂದ ಎಚ್ಚೆತ್ತ ಇಲಾಖೆ ದಾಳಿ ಮಾಡಿದ್ದ ಕಾಡಾನೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿತ್ತು.