ಬೆಂಗಳೂರು: ಟ್ಯೂಷನ್ ಮುಗಿಸಿ ಮನೆಗೆ ಬರುತ್ತಿದ್ದ ಬಾಲಕ ನಿಶ್ಚಿತ್‌ನನ್ನು ಅಪಹರಿಸಿ, ಬರ್ಬರವಾಗಿ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಹುಳಿಮಾವು ಠಾಣೆ ಪೊಲೀಸರು ಗುಂಡು ಹಾರಿಸಿ, ಹೆಡೆಮುರಿ ಕಟ್ಟಿದ್ದಾರೆ. ಗುರುಮೂರ್ತಿ ಹಾಗೂ ಗೋಪಾಲಕೃಷ್ಣ ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ಗುರುವಾರ ತಡರಾತ್ರಿ ಕಗ್ಗಲೀಪುರ ರಸ್ತೆಯ ಬಳಿಯಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲು ಹುಳಿಮಾವು ಠಾಣೆ ಪೊಲೀಸರು ತೆರಳಿದ್ದರು. ಈ ವೇಳೆ ಮಾರಕಾಸ್ತ್ರಗಳನ್ನು ಬಳಸಿ ಆರೋಪಿಗಳು ಪೊಲೀಸರ ಮೇಲೆ ದಾಳಿಗೆ ಮುಂದಾದಾಗ, ಇನ್ಸ್‌ಪೆಕ್ಟರ್ ಕುಮಾರಸ್ವಾಮಿ ಹಾಗೂ ಪಿಎಸ್ಐ ಅರವಿಂದ್ ಕುಮಾರ್ ಆರೋಪಿಗಳ ಕಾಲಿಗೆ ಗುಂಡು ಹಾರಿಸುವ ಮೂಲಕ ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಗುರುಮೂರ್ತಿಯ ಎರಡು ಕಾಲುಗಳು ಹಾಗೂ ಗೋಪಾಲಕೃಷ್ಣನ ಒಂದು ಕಾಲಿಗೆ ಗುಂಡು ತಗುಲಿದ್ದು, ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಕರಣದ ವಿವರ: ಬೆಂಗಳೂರಿನ ಅರಕೆರೆಯ ಶಾಂತಿನಿಕೇತನ ಲೇಔಟ್‌ನಲ್ಲಿ ನಿಶ್ಚಿತ್ ಮತ್ತು ಆತನ ಪೋಷಕರು ವಾಸವಾಗಿದ್ದರು. ನಗರದ ಪ್ರತಿಷ್ಠಿತ ಕಾಲೇಜ್‌ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದ ನಿಶ್ಚಿತ್ ತಂದೆಯ ಬಳಿ ಆರೋಪಿ ಗುರುಮೂರ್ತಿ ಹೆಚ್ಚುವರಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಆಗಾಗ ಮನೆಗೆ ಹೋಗಿ ಬರುತ್ತಿದ್ದ ಗುರುಮೂರ್ತಿ, ನಿಶ್ಚಿತ್‌ನನ್ನು ಅಪಹರಿಸಿ ಹಣಕ್ಕೆ ಬೇಡಿಕೆಯಿಡುವ ಸಂಚು ರೂಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.