ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಕೆಲವರು ನಡೆಸುತ್ತಿರುವ ಅಪಪ್ರಚಾರವನ್ನು ಖಂಡಿಸಿ ಅಗಸ್ಟ್ 17 ರಂದು ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಹು-ಧಾ ಬಂಟರ ಸಂಘದ ಅಧ್ಯಕ್ಷ ವಿಜಯಾನಂದ ಶೆಟ್ಟಿ ಹೇಳಿದರು.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೂತ್ತಿಟ್ಟ ಶವಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ತನಿಖೆ ನಡೆಯುತ್ತಿದೆ, ತನಿಖೆ ಪೂರ್ಣಗೊಂಡಿಲ್ಲ, ಆಗಲೇ ಕೆಲ ಯೂಟ್ಯೂಬರ್’ಗಳು ಧರ್ಮಸ್ಥಳದ ಬಗ್ಗೆ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಇದು ಖಂಡನೀಯ ಎಂದರು.
ಕರ್ನಾಟಕ ಸರ್ಕಾರವು ಸಾಮಾಜಿಕ ಜಾಲತಾಣದಲ್ಲಿ ಬಂದ ಸುದ್ದಿ ಆಧಾರದ ಮೇಲೆ ಸುಮೋಟೋ ಪ್ರಕರಣ ದಾಖಲಿಸಿಕೊಂಡು ಎಸ್ಐಟಿ ರಚನೆ ಮಾಡಿದೆ. ಅದರಂತೆ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧವೂ ಸುಮೋಟೋ ಪ್ರಕರಣ ದಾಖಲಿಸಿಕೊಂಡು ಕ್ರಮಕೈಕೊಳ್ಳಬೇಕು ಎಂದು ಆಗ್ರಹಿಸಿದರು.
ದಕ್ಷಿಣ ಕನ್ನಡದ ದ್ರಾವಿಡ ಬ್ರಾಹ್ಮಣ ಸಂಘದ ಅಧ್ಯಕ್ಷ ಅನಂಯ ಪದ್ಮನಾಭ ಐತಾಳ ಮಾತನಾಡಿ, ಕೋಟ್ಯಾಂತರ ಭಕ್ತರ ಆರಾಧ್ಯದೈವ ಧರ್ಮಸ್ತಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರ ಖಂಡನೀಯ, ಅರ್ಧಂಬರ್ಧ ತಿಳಿದುಕೊಂಡ ಕೆಲವರು ಭಕ್ತರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಧಾರ್ಮಿಕ ನಂಬಿಕೆಗೆ ದಕ್ಕೆ ಬರಬಾರದೆಂದು ನಾವು ಹೋರಾಟ ಹಮ್ಮಿಕೊಂಡಿದ್ದೇವೆ ಎಂದರು.
ಸಮೂದಾಯ ಮುಖಂಡ ಎಸ್.ಬಿ.ಶೆಟ್ಟಿ ಮಾತನಾಡಿ, ಕ್ಷೇತ್ರದ ಪಾವಿತ್ರ್ಯ ಹಾಳು ಮಾಡುವ ಕೆಲಸ ನಡೆಯುತ್ತಿದೆ. ತನಿಖೆ ನಡೆಯುವ ಸಂದರ್ಭದಲ್ಲಿ ತೀರ್ಪು ನೀಡಲು ಯಾರಿಗೂ ಅಧಿಕಾರವಿಲ್ಲ, ಈ ಷಡ್ಯಂತ್ರ ವಿರುದ್ಧ ನಾವು ಕೂಡಾ ಕಾನೂನು ಹೋರಾಟ ಮಾಡುತ್ತೇವೆ ಎಂದರು.
ಉದ್ಯಮಿ ರಾಜೇಂದ್ರ ಶೆಟ್ಟಿ ಮಾತನಾಡಿ, ಧರ್ಮಸ್ಥಳದ ಉಳಿವಿಗಾಗಿ ಎಂತಹದ್ದೇ ಹೋರಾಟಕ್ಕೆ ನಾವು ಸಿದ್ದ, ಅಗತ್ಯವಿದ್ದರೇ ಅಪಪ್ರಚಾರ ಮಾಡುವವರ ವಿರುದ್ಧ ದೂರು ನೀಡಲು ಸಹ ಹಿಂದೆಟ್ಟು ಹಾಕುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಅಗಸ್ಟ್ 17 ರಂದು ಬೆಳಿಗ್ಗೆ 10 ಕ್ಕೆ ಇಲ್ಲಿನ ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಮೂಲಕ ಚೆನ್ನಮ್ಮ ವೃತ್ತಕ್ಕೆ ಆಗಮಿಸಿ ಪ್ರತಿಭಟನಾ ಸಭೆ ನಡೆಸಲಾಗುವುದು, ನಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸದಸ್ಯರಾದ ರತ್ನಾಕರ ಶೆಟ್ಟಿ, ಸತೀಶ ಶೆಟ್ಟಿ, ಬಿಲ್ಲವ ಸಮೂದಾಯದ ಕಾರ್ಯದರ್ಶಿ ವಿವೇಕ ಪೂಜಾರಿ, ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ರತ್ನಾಕರ ಗೌಡ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
Laxmi News 24×7