ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದೆ.
ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ ನಡೆದ ಅಹಿಂಸಾತ್ಮಕ ಹೋರಾಟದ ಮೂಲಕ ಭಾರತೀಯರು ಗಳಿಸಿದ ಸ್ವಾತಂತ್ರ್ಯವು ಜಗತ್ತಿನ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಿದ್ದು, ವಿಶ್ವದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿದೆ ಎಂದು ಸ್ಮರಿಸಿದೆ.
ಸ್ವಾತಂತ್ರ್ಯ ಹೋರಾಟದಲ್ಲಿ ಬೆಳಗಾವಿ ಜಿಲ್ಲೆಯ ಪಾತ್ರವು ಅಮೂಲ್ಯ. ಅಪ್ರತಿಮ ಹೋರಾಟಗಾರರು, ನಿಷ್ಠಾವಂತ ದೇಶಭಕ್ತರು, ಸ್ವಾಭಿಮಾನಿ ಸೇನಾನಿಗಳು ದೇಶಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿ, ಈ ನೆಲವನ್ನು ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿರಿಸಿದರು.
ಇಂದು, ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಮ್ಮ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿ, ಸಾಮಾಜಿಕ ನ್ಯಾಯ ಹಾಗೂ ಸಮಾನತೆಯ ಹಾದಿಯಲ್ಲಿ ದೃಢ ಹೆಜ್ಜೆ ಇಟ್ಟಿದೆ. ಜನತೆಗೆ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳು — ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ ಮತ್ತು ಯುವನಿಧಿ — ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ರಾಜ್ಯದ ಸರ್ವತೋಮುಖ ಪ್ರಗತಿಗಾಗಿ ಶ್ರಮಿಸಲಾಗುತ್ತಿದೆ ಎಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದೆ.
“ಸ್ವಾತಂತ್ರ್ಯದ ಅಮೂಲ್ಯ ಮೌಲ್ಯಗಳನ್ನು ಕಾಪಾಡಿ, ಅಭಿವೃದ್ಧಿಯ ಹಾದಿಯಲ್ಲಿ ಒಗ್ಗಟ್ಟಿನಿಂದ ಸಾಗುವುದು ಪ್ರತಿಯೊಬ್ಬರ ಕರ್ತವ್ಯ”
ಈ ಸಂದರ್ಭದಲ್ಲಿ ಶಾಸಕರಾದ ಆಸೀಫ್(ರಾಜು) ಸೇಠ, ಮಹಾನಗರ ಪಾಲಿಕೆ ಮಹಾಪೌರ ಮಂಗೇಶ ಪವಾರ, ಉಪ ಮಹಾಪೌರೆ ವಾಣಿ ಜೋಶಿ, ವಿಧಾನ ಪರಿಷತ್ ಸದಸ್ಯರಾದ ಸಾಬಣ್ಣ ತಳವಾರ, ನಗರ ಸೇವಕರು, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೋಲಿಸ್ ಆಯುಕ್ತ ಭೂಷಣ ಗುಲಾಬರಾವ್ ಭೋರಸೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ, ಅಪರ ಜಿಲ್ಲಾಧಿಕಾರಿ ವಿಜಯಕುಮಾನರ ಹೊನಕೇರಿ,
ಉಪವಿಭಾಗಾಧಿಕಾರಿ ಶ್ರವಣ ನಾಯಕ್, ತಹಶೀಲ್ದಾರ ಬಸವರಾಜ ನಾಗರಾಳ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು, ಶಾಲಾ-ಕಾಲೇಜು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
Laxmi News 24×7