ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದೇವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ವಿಧಾನಪರಿಷತ್ನಲ್ಲಿ ಪ್ರಶ್ನೋತ್ತರ ಅವಧಿಯ ವೇಳೆ ಕಾಂಗ್ರೆಸ್ ಸದಸ್ಯ ಅನಿಲ್ ಕುಮಾರ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ ಮೂರು ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕಡಿಮೆಯಾಗಿದೆ. ಗುಣಮಟ್ಟದ ಶಿಕ್ಷಣ ಕೊಡುವ ಪ್ರಯತ್ನ ನಡೆಯುತ್ತಿದ್ದರೂ ಗಣನೀಯ ಪ್ರಮಾಣದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗುತ್ತಿಲ್ಲ. ಪೋಷಕರು ಖಾಸಗಿ ಶಾಲೆಗಳತ್ತ ಒಲವು ತೋರಿರುವುದು ಹೆಚ್ಚಾಗಿದೆ ಎಂದರು.
ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ವಹಣೆ, ಲ್ಯಾಬ್‌ಗಳಿಲ್ಲದಿರುವುದು, ಶಿಕ್ಷಕರ ಕೊರತೆಯಿಂದಾಗಿ ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಸೆಳೆಯಲು ಸರ್ಕಾರ ಕೈಗೊಂಡಿರುವ ಕ್ರಮಗಳೇನು ಎಂಬ ಪ್ರಶ್ನೆ ಸದನದಲ್ಲಿ ಕೇಳಲಾಯಿತು.
ಇದಕ್ಕೆ ಉತ್ತರಿಸಿದ ಸಚಿವರು, ಕಳೆದ ಎರಡು ವರ್ಷಗಳಲ್ಲಿ ಸರ್ಕಾರಿ ಶಾಲೆಗಳ ಮೂಲಸೌಕರ್ಯಗಳಿಗೆ ಹೆಚ್ಚಿನ ಒತ್ತು ಕೊಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಹಿಡಿದಿಟ್ಟುಕೊಳ್ಳಲು ಈ ವರ್ಷ 5 ಸಾವಿರ ಶಾಲೆಗಳಲ್ಲಿ ಎಲ್‌ಕೆಜಿ ಯುಕೆಜಿ ಆರಂಭಿಸಲಾಗಿದೆ. ಈ ವರ್ಷ 144 ಸರ್ಕಾರಿ ಪ್ರೌಢಶಾಲೆಗಳನ್ನು ತೆರಯಲು ಅನುಮತಿ ನೀಡಲಾಗಿದೆ. ಇನ್ನು 20 ರಿಂದ 25 ಶಾಲೆಗಳನ್ನು ಮಂಜೂರು ಮಾಡಲು ನಿರ್ಧರಿಸಲಾಗಿದೆ. ಶಿಕ್ಷಣ ಇಲಾಖೆಯಿಂದ 500 ಕರ್ನಾಟಕ ಪಬ್ಲಿಕ್ ಶಾಲೆಗಳು ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮದಿಂದ 1 ಸಾವಿರ ಕೆಪಿಎಸ್ ಶಾಲೆಗಳನ್ನು ತೆರೆಯಲಾಗಿದೆ. ಕೆಪಿಎಸ್ ಶಾಲೆಗಳ ಆರಂಭದಿಂದ ಶಿಕ್ಷಣದ ಗುಣಮಟ್ಟದ ಬಗ್ಗೆ ಪೋಷಕರಲ್ಲಿ ವಿಶ್ವಾಸ ಬಂದಿದೆ ಎಂದು ಸಚಿವರು ಹೇಳಿದರು.
Laxmi News 24×7