ಬೆಂಗಳೂರು : ಧಾರವಾಡ ಜಿಲ್ಲೆಯ ಹೆಬ್ಬಳ್ಳಿಯ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣದ ಆರೋಪಿಯಾಗಿದ್ದ ಅಶ್ವತ್ಥ್ ಅವರ ಜಾಮೀನನ್ನು ಹೈಕೋರ್ಟ್ ತಾತ್ಕಾಲಿಕವಾಗಿ ರದ್ದುಪಡಿಸಿ ಆದೇಶ ಹೊರಡಿಸಿದೆ.
ಬಿಜೆಪಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಒಂಬತ್ತನೇ ಆರೋಪಿ ಅಶ್ವತ್ಥ್ ಎಂಬುವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ಐ. ಅರುಣ್ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಅಲ್ಲದೆ, ಪ್ರಕರಣ ಸಂಬಂಧ ಇತರೆ ಸಾಕ್ಷಿಗಳ ಸಂಖ್ಯೆಗಳಾದ 10, 30 ಮತ್ತು 40ರ ವಿಚಾರಣೆ ಪೂರ್ಣಗೊಳ್ಳುವವರೆಗೂ ಜೈಲಿನಲ್ಲಿರಬೇಕು. ಅವರ ವಿಚಾರಣೆ ಪೂರ್ಣಗೊಂಡ ಬಳಿಕ ಮತ್ತೊಮ್ಮೆ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಪೀಠ ತಿಳಿಸಿದೆ.
ವಿಚಾರಣೆ ವೇಳೆ ವಿಶೇಷ ಸರ್ಕಾರಿ ಅಭಿಯೋಜಕರು, ಪ್ರಾಸಿಕ್ಯೂಷನ್ ಸಾಕ್ಷಿಯಾಗಿರುವ ಬಸವರಾಜ ಮುತ್ತಗಿಗೆ ಅಶ್ವತ್ಥ್ ಜೀವ ಬೆದರಿಕೆ ಹಾಕಿದ್ದಾನೆ. ಮತ್ತೊಬ್ಬ ಸಾಕ್ಷಿಗೂ ಕೋರ್ಟ್ ಆವರಣದಲ್ಲೇ ಅಶ್ವತ್ಥ್ ಬೆದರಿಕೆ ಹಾಕಿದ್ದಾನೆ. ಸಿವಿಲ್ ನ್ಯಾಯಾಲಯದ ಸಿಸಿಟಿವಿಯಲ್ಲಿ ಅಶ್ವತ್ಥ್ ಬೆದರಿಕೆ ಹಾಕಿರುವ ದೃಶ್ಯ ಸೆರೆಯಾಗಿದೆ ಎಂದು ವಾದಿಸಿದ್ದರು. ಪ್ರಕರಣ ಸಂಬಂಧ ಇತ್ತೀಚೆಗೆ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿತ್ತು.
ಪ್ರಕರಣದ ಹಿನ್ನೆಲೆ : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಮುಖ ಆರೋಪಿ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದ್ದು, ಕುಲಕರ್ಣಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. 9 ತಿಂಗಳ ಕಾಲ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ವಿನಯ್ ಕುಲಕರ್ಣಿಗೆ ಷರತ್ತು ವಿಧಿಸಿ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ ನಡುವೆ ವಿನಯ್ ಕುಲಕರ್ಣಿಗೆ ಮಂಜೂರಾಗಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿ ಆದೇಶಿಸಿತ್ತು.
ಇದೇ ಪ್ರಕರಣದ ಮತ್ತೊಬ್ಬ ಆರೋಪಿ ಅಶ್ವತ್ಥ್ ಎಂಬುವರಿಗೆ ಮಂಜೂರಾಗಿದ್ದ ಜಾಮೀನನ್ನು ರದ್ದುಪಡಿಸಬೇಕು ಎಂದು ಕೋರಿ ಸಿಬಿಐ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಪ್ರಕರಣದ ಇತರೆ ಸಾಕ್ಷಿಗಳ ವಿಚಾರಣೆ ಪೂರ್ಣಗೊಳ್ಳುವವರೆಗೂ ಜಾಮೀನು ರದ್ದುಮಾಡಿ ಆದೇಶಿಸಿದೆ.