ಬಳ್ಳಾರಿ: ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಪರಿಣಾಮ ಕಂಪ್ಲಿ ಸೇತುವೆ ಮುಳುಗಡೆಯಾಗಿದ್ದು, ಬಳ್ಳಾರಿ – ಗಂಗಾವತಿ ಸಂಪರ್ಕ ಸ್ಥಗಿತಗೊಂಡಿದೆ.
ಮಲೆನಾಡು ಪ್ರದೇಶ ಸೇರಿದಂತೆ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಮಳೆ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಕೂಡ ಗಣನೀಯವಾಗಿ ಹೆಚ್ಚಾಗಿದೆ. ಸದ್ಯ 1,07,500 ಕ್ಯೂಸೆಕ್ ನೀರಿನ ಒಳ ಹರಿವು ಇದೆ. ಜಲಾಶಯದ ಸುರಕ್ಷತಾ ದೃಷ್ಟಿಯಿಂದ 26 ಗೇಟ್‌ಗಳ ಮೂಲಕ 1,06,548 ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ.

ಏಕಾಏಕಿ ಅಪಾರ ಪ್ರಮಾಣದ ನೀರು ನದಿಗೆ ರಿಲೀಸ್ ಮಾಡಿರುವುದರಿಂದ ಬಳ್ಳಾರಿ ಜಿಲ್ಲೆಯ ಕಂಪ್ಲಿ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಪರಿಣಾಮ ಬಳ್ಳಾರಿ – ಗಂಗಾವತಿ ಸಂಪರ್ಕ ಕಡಿತವಾಗಿದ್ದು, ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬ್ಯಾರಿಕೇಡ್ ಅಳವಡಿಸಿ, ಪೊಲೀಸರ ನಿಯೋಜನೆ ಮಾಡಲಾಗಿದೆ. ಅಲ್ಲದೇ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಿರುವುದರಿಂದ ನದಿ ಪಾತ್ರದ ಗ್ರಾಮಗಳ ಜನರು ನದಿ ತೀರಕ್ಕೆ ಹೋಗದಂತೆ ತುಂಗಭದ್ರಾ ಜಲಾಶಯ ಬೋರ್ಡ್ ಎಚ್ಚರಿಕೆ ನೀಡಿದೆ.