ಬೆಂಗಳೂರು : ನಾನು ಅಪ್ಪಟ ಕಾಂಗ್ರೆಸಿಗ. ಹುಟ್ಟಿನಿಂದ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಜೀವ ಇರುವ ತನಕವೂ ಕಾಂಗ್ರೆಸಿಗನಾಗಿಯೇ ಇರುತ್ತೇನೆ. ನನ್ನ ಜೀವ, ನನ್ನ ರಕ್ತ ಎಲ್ಲವೂ ಕಾಂಗ್ರೆಸ್. ನಾನೀಗ ಪಕ್ಷವನ್ನು ಮುನ್ನಡೆಸುತ್ತಿದ್ದೇನೆ. ಅದಕ್ಕೆ ಆಧಾರಸ್ತಂಭವಾಗಿ ನಿಲ್ಲುತ್ತೇನೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯಲ್ಲಿ ಆರ್ಎಸ್ಎಸ್ ಗೀತೆ ಹಾಡಿದ್ದರ ಪರಿಣಾಮ ನೀವು ಬಿಜೆಪಿ ಹಾಗೂ ಆರ್ಎಸ್ಎಸ್ ಜೊತೆ ಕೈ ಜೋಡಿಸುವ ಬಗ್ಗೆ ಚರ್ಚೆಯಾಗುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ನಾನು ಪರೋಕ್ಷವಾಗಿ, ಪ್ರತ್ಯಕ್ಷವಾಗಿ ಯಾವುದೇ ರೀತಿಯಲ್ಲೂ ಅವರ ಜೊತೆ ಕೈ ಜೋಡಿಸುವ ಪ್ರಮೇಯವೇ ಇಲ್ಲ. ನಾನು ಅಪ್ಪಟ ಕಾಂಗ್ರೆಸಿಗ. ಜನತಾದಳ, ಬಿಜೆಪಿ ಬಗ್ಗೆ ಸಂಶೋಧನೆ ಮಾಡುತ್ತಿರುತ್ತೇನೆ. ಅದೇ ರೀತಿ ಆರ್ಎಸ್ಎಸ್ ಬಗ್ಗೆಯೂ ತಿಳಿದುಕೊಂಡಿದ್ದೇನೆ ಎಂದಿದ್ದಾರೆ.
ನಾನು ಪ್ರತಿಯೊಂದು ರಾಜಕೀಯ ಪಕ್ಷಗಳ ಬಗ್ಗೆಯೂ ನನ್ನದೇ ಆದ ಸಂಶೋಧನೆ ನಡೆಸಿದ್ದೇನೆ. ಆರ್ಎಸ್ಎಸ್ ರಾಜ್ಯದಲ್ಲಿ ಹೇಗೆ ತನ್ನ ಸಂಘಟನೆ ಕಟ್ಟಿತು ಎಂಬುದು ನನಗೆ ತಿಳಿದಿದೆ. ಆರ್ಎಸ್ಎಸ್ ಪ್ರತಿ ತಾಲೂಕು, ಜಿಲ್ಲೆ ಸೇರಿದಂತೆ ಎಲ್ಲ ಕಡೆ ಶಿಕ್ಷಣ ಸಂಸ್ಥೆಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುತ್ತಿದೆ. ಸಾಕಷ್ಟು ಹಣ ಹೂಡಿಕೆ ಮಾಡುತ್ತಿದೆ. ಮಕ್ಕಳನ್ನು ತಲುಪುವ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.
ರಾಜಕೀಯವಾಗಿ ನಾವು ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ರಾಜಕೀಯ ವ್ಯಕ್ತಿಯಾದ ನಾನು ರಾಜಕೀಯ ಎದುರಾಳಿಗಳಲ್ಲಿ ಯಾರು ಸ್ನೇಹಿತರಿದ್ದಾರೆ, ಯಾರು ಶತ್ರುಗಳಿದ್ದಾರೆ ಎನ್ನುವುದನ್ನು ತಿಳಿಯಬೇಕಲ್ಲವೇ? ಆದ ಕಾರಣಕ್ಕೆ ಆರ್ಎಸ್ಎಸ್ ಇತಿಹಾಸ ತಿಳಿದುಕೊಂಡಿದ್ದೇನೆ ಎಂದಿದ್ದಾರೆ.
ಕೆಲವೊಂದು ಸಂದರ್ಭದಲ್ಲಿ ಕೆಲವೊಂದು ಸಂಸ್ಥೆಗಳಲ್ಲಿ ಒಂದಷ್ಟು ಒಳ್ಳೆಯ ಗುಣಗಳಿರುತ್ತವೆ. ಅವುಗಳನ್ನೂ ನಾವು ಗಮನಿಸಬೇಕಲ್ಲವೇ? ನೇರವಾಗಿ, ದಿಟ್ಟವಾಗಿ ಮಾತನಾಡುವುದು ನಮ್ಮ ಗುಣ. ಬೇರೆಯವರಲ್ಲಿರುವ ಒಳ್ಳೆಯ ಗುಣಗಳನ್ನು ಗಮನಿಸಬೇಕು. ಅದೇ ರೀತಿ ನಾವು ಮಾಡಿದ್ದೇವೆ ಎಂದು ಹೇಳಿದ್ದಾರೆ.
ನಿಮ್ಮಲ್ಲೂ (ಮಾಧ್ಯಮ) ಒಬ್ಬೊಬ್ಬರದು ಒಂದೊಂದು ಗುಣ. ಹಿಡಿಯಲು ಬಂದರೆ ಜಾರಿಕೊಳ್ಳುವ ಗುಣವಿದೆ. ಒಳ್ಳೆಯ ಗುಣವೂ ಇದೆ. ಅವನ್ನು ನಾವು ಗಮನಿಸಬೇಕಲ್ಲವೇ? ಎಂದು ಡಿಸಿಎಂ ಉದಾಹರಣೆ ಕೊಟ್ಟಿದ್ದಾರೆ.
ಬಿಜೆಪಿ ಠುಸ್ ಗಿರಾಕಿ : ಬಿಜೆಪಿಯವರು ಧರ್ಮಸ್ಥಳ ಯಾತ್ರೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಬಿಜೆಪಿ ಒಂದು ಠುಸ್ ಗಿರಾಕಿ. ಅವರು ಮಾಡುತ್ತಿರುವುದು ರಾಜಕಾರಣ. ಹಿರಿಯ ಅಧಿಕಾರಿ ಮೊಹಾಂತಿ ಅವರ ನೇತೃತ್ವದಲ್ಲಿ ತನಿಖಾ ತಂಡವು ಅಚ್ಚುಕಟ್ಟಾಗಿ ತಮ್ಮ ಕೆಲಸ ನಿರ್ವಹಿಸುತ್ತಿದೆ” ಎಂದಿದ್ದಾರೆ.
Laxmi News 24×7