ಶಾಲೆ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ
ಯಾದಗಿರಿ: ಇಲ್ಲಿನ ಸರ್ಕಾರಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದೆ. ಆಗಸ್ಟ್ 27ರಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಗೆ ಹೆರಿಗೆ ನೋವು ಕಾಣಿಸಿಕೊಂಡಿರುವುದನ್ನು ಗಮನಿಸಿದ ಸಹಪಾಠಿಗಳು ಶಾಲಾ ಆಡಳಿತ ಮಂಡಳಿಗೆ ಮಾಹಿತಿ ನೀಡಿದ ನಂತರ, ಈ ವಿಷಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಎಫ್‌ಐಆರ್‌ನಲ್ಲಿ, ಬಾಲಕಿ ಪೂರ್ಣಾವಧಿ ಗರ್ಭಿಣಿಯಾಗಿದ್ದಳು ಮತ್ತು ಸುಮಾರು ಒಂಬತ್ತು ತಿಂಗಳ ಹಿಂದೆ ಅಪರಿಚಿತ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಳು ಎಂದು ಉಲ್ಲೇಖಿಸಲಾಗಿದೆ.
ಆರಂಭದಲ್ಲಿ, ಸಾಕಷ್ಟು ಒತ್ತಡದಲ್ಲಿದ್ದೇನೆ ಎಂದು ಹೇಳಿದ್ದ ಬಾಲಕಿ ಘಟನೆಯ ವಿವರ ಅಥವಾ ಅದರಲ್ಲಿ ಭಾಗಿಯಾಗಿರುವ ವ್ಯಕ್ತಿಯ ಹೆಸರು ಬಹಿರಂಗಪಡಿಸಲು ನಿರಾಕರಿಸಿದ್ದಳು. ಶೌಚಾಲಯದಲ್ಲಿದ್ದಾಗ ಹೊಟ್ಟೆ ನೋವು ಕಾಣಿಸಿಕೊಂಡು ಅಲ್ಲಿ ಮಗುವಿಗೆ ಜನ್ಮ ನೀಡಿರುವುದಾಗಿ ಮಾತ್ರ ಅಧಿಕಾರಿಗಳಿಗೆ ತಿಳಿಸಿದ್ದಳು.
ಬಾಲಕಿ ಮತ್ತು ಮಗು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.
ತನಿಖೆಯ ಸಮಯದಲ್ಲಿ ಪೊಲೀಸರು ಆರೋಪಿಯನ್ನು 28 ವರ್ಷದ ವ್ಯಕ್ತಿ ಎಂದು ಗುರುತಿಸಿದ್ದಾರೆ. ಬಾಲಕಿ ಚೇತರಿಸಿಕೊಂಡು ವೈದ್ಯರು ಆರೋಗ್ಯವಾಗಿದ್ದಾಳೆಂದು ಘೋಷಿಸಿದ ನಂತರ ಏನಾಯಿತು ಮತ್ತು ಆಕೆಗೆ ಆರೋಪಿಯ ಪರಿಚಯವಿದೆಯೇ? ಎಂಬುದನ್ನು ಖಚಿತಪಡಿಸಿಕೊಳ್ಳಲು ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಶಾಲಾ ಆಡಳಿತ ಮಂಡಳಿಯಾಗಲಿ ಅಥವಾ ಸಂತ್ರಸ್ತೆಯ ಸಹೋದರನಾಗಲಿ ತಿಳಿಸಿಲ್ಲ ಎಂದು ಪೊಲೀಸರು ಹೇಳಿದ್ದಾರೆ.