(ಬೆಂಗಳೂರು): ಕಟ್ಟಡ ನಿರ್ಮಾಣಕ್ಕಾಗಿ ಪಾಯ ಅಗೆಯುತ್ತಿದ್ದ ವೇಳೆ ಮಳೆ ನೀರು ಪಾಯಕ್ಕೆ ನುಗ್ಗಿ ಪಾಯದಲ್ಲಿನ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ಕಳೆದ ರಾತ್ರಿ ಯಲಹಂಕದಲ್ಲಿ ಸಂಭವಿಸಿದೆ.
ಆಂಧ್ರ ಪ್ರದೇಶ ಮೂಲದ ಜೆ.ಶಿವಾ (32) ಮತ್ತು ಮಧುಸುದನ್ ರೆಡ್ಡಿ (58) ಮೃತ ಕಾರ್ಮಿಕರು. ಇಲ್ಲಿನ ಎಂಬೆಸ್ಸಿ ಗ್ರೂಪ್ ಸಂಸ್ಥೆಯ ಕಟ್ಟಡದಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿದೆ ಎಂದು ಮಾಹಿತಿ ಲಭ್ಯವಾಗಿದೆ.
ಕಟ್ಟಡ ನಿರ್ಮಾಣಕ್ಕಾಗಿ ಕಾರ್ಮಿಕರು ದೊಡ್ಡದಾದ ಗುಂಡಿ ತೆಗೆದಿದ್ದರು. ಈ ಗುಂಡಿಗೆ ಇಳಿದು ಕೆಲಸ ಮಾಡುತ್ತಿದ್ದಾಗ ರಾತ್ರಿ ಅನಿರೀಕ್ಷಿತವಾಗಿ ಮಳೆ ಸುರಿದಿದೆ. ಪರಿಣಾಮ ಗುಂಡಿಯಲ್ಲಿ ಮಳೆ ನೀರು ಸಂಗ್ರಹವಾಗಿದ್ದರಿಂದ ಕಾರ್ಮಿಕರು ತಕ್ಷಣವೇ ಹೊರಬರಲು ಯತ್ನಿಸಿದ್ದರು. ಈ ವೇಳೆ, ಇಬ್ಬರ ಮೇಲೆ ಗುಂಡಿಯಲ್ಲಿನ ಮಣ್ಣು ಕುಸಿದಿದೆ. ಪರಿಣಾಮ ಮಣ್ಣಿನಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿತ್ತು. ಆತನನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಆತನು ಸಹ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ.
ಮೃತ ಇಬ್ಬರು ಕಾರ್ಮಿಕರು ಆಂಧ್ರ ಮೂಲದವರೆಂದು ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ಶವಾಗಾರಕ್ಕೆ ರವಾನಿಸಲಾಗಿದ್ದು, ಈ ಬಗ್ಗೆ ಯಲಹಂಕ ಠಾಣೆಯಲ್ಲಿ ದೂರು ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ವಾಯುಭಾರ ಕುಸಿತದಿಂದ ವ್ಯಾಪಕ ಮಳೆ: ವಾಯುಭಾರ ಕುಸಿತದಿಂದ ರಾಜ್ಯದ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವುದಲ್ಲದೇ, ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈರುತ್ಯ ಮುಂಗಾರು ಚೇತರಿಸಿಕೊಂಡಿದ್ದು, ಈ ವಾರದ ಅಂತ್ಯದವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಕರಾವಳಿಗೆ ಹೊಂದಿಕೊಂಡಿರುವ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯ ಉತ್ತರ ಭಾಗದ ಒಡಿಶಾ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಗಳಿವೆ. ಇದರಿಂದ ಸೆ.7ರ ವರೆಗೆ ಕೊಪ್ಪಳ, ಬೀದರ್ ಹಾಗೂ ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲೂ ವ್ಯಾಪಕ ಹಾಗೂ ಭಾರಿ ಮಳೆಯಾಗಬಹುದು ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹೇಳಿರುವ ಹವಾಮಾನ ಇಲಾಖೆ, ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಿಲ್ಲ.
ಸೋಮವಾರ ಬೆಂಗಳೂರು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗಿದ್ದು, ಇಂದು (ಮಂಗಳವಾರ) ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿಂದು ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.