ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನ ಎದುರಿಸುತ್ತಿರುವ ನಟಿ ರನ್ಯಾ ರಾವ್ಗೆ 102.55 ಕೋಟಿ ರೂಪಾಯಿ ದಂಡ ಪಾವತಿಸುವಂತೆ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಅಧಿಕಾರಿಗಳು ನೋಟಿಸ್ ರವಾನಿಸಿದ್ದಾರೆ. ಹಾಗೂ ಇನ್ನುಳಿದ ಆರೋಪಿಗಳಾದ ತರುಣ್ ಕೊಂಡೂರು ರಾಜುಗೆ 62 ಕೋಟಿ ರೂ, ಸಾಹಿಲ್ ಜೈನ್ ಮತ್ತು ಭರತ್ ಜೈನ್ ಅವರಿಗೆ ತಲಾ 53 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ ಎಂದು ಡಿಆರ್‌ಐ ಮೂಲಗಳು ಮಾಹಿತಿ ನೀಡಿವೆ.
ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ರನ್ಯಾ ರಾವ್ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದರು. ಬಂಧನದ ಸಂದರ್ಭದಲ್ಲಿ ರನ್ಯಾ ರಾವ್ ಬಳಿ 14.8 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು. ಕೂಡಲೇ ರನ್ಯಾ ರಾವ್ ಅವರನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದರು. ಬಳಿಕ, ವಿಚಾರಣೆ ನಡೆಸಿದ ಡಿಆರ್‌ಐ ಅಧಿಕಾರಿಗಳು ರನ್ಯಾ ರಾವ್ ಸಹಚರರಾದ ತರುಣ್, ಕೊಡೂರು ರಾಜು ಹಾಗೂ ಸಾಹಿಲ್ ಸಕಾರಿಯಾ ಜೈನ್ ಅವರನ್ನು ಬಂಧಿಸಿದ್ದರು.
ಇದೀಗ ದಂಡ ಪಾವತಿಸದಿದ್ದರೆ, ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬಹುದು ಎಂದು ನೋಟಿಸ್‌ನಲ್ಲಿ ವಿವರಿಸಲಾಗಿದೆ. ರನ್ಯಾ ರಾವ್ ವಿರುದ್ಧ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆಯನ್ನು (COFEPOSA) ಜಾರಿ ಮಾಡಲಾಗಿದ್ದು, ಬಂಧನದ ಸಂಪೂರ್ಣ ಅವಧಿಯಲ್ಲಿ ಜಾಮೀನು ಸಿಗದಂತಾಗಿದೆ.
ಮಾರ್ಚ್ 3ರ ಸಂಜೆ 6.30ಕ್ಕೆ ದುಬೈನಿಂದ ಬೆಂಗಳೂರಿಗೆ ಎಮಿರೇಟ್ಸ್ ವಿಮಾನದಲ್ಲಿ ಬಂದಿಳಿದಿದ್ದ ರನ್ಯಾರನ್ನು ಡಿಆರ್‌ಐ ಅಧಿಕಾರಿಗಳು ಪರಿಶೀಲಿಸಿದ್ದರು. ಮೊದಲಿಗೆ ರನ್ಯಾ ಅವರ ಕೈ ಚೀಲವನ್ನು (ಹ್ಯಾಂಡ್ ಬ್ಯಾಗ್) ಪರಿಶೀಲಿಸಲಾಗಿ, ಅದರಲ್ಲಿ ಏನೂ ಪತ್ತೆಯಾಗಿರಲಿಲ್ಲ. ಹೀಗಾಗಿ, ಮಹಿಳಾ ಡಿಆರ್‌ಐ ತನಿಖಾಧಿಕಾರಿಯು ರನ್ಯಾ ಅವರನ್ನು ಪರಿಶೀಲಿಸುವ ಉದ್ದೇಶದಿಂದ ಲಿಖಿತವಾಗಿ ಒಪ್ಪಿಗೆ ಪಡೆದಿದ್ದರು.
ತಪಾಸಣೆಯ ವೇಳೆ ಆಕೆಯ ನಡುವಿನ ಭಾಗ, ಮಂಡಿಯ ಕೆಳಭಾಗ, ತೊಡೆಗೆ ಚಿನ್ನದ ಬಾರ್ಗಳನ್ನು ಮೆಡಿಕಲ್ ಅಡ್ಹೆಸಿವ್ ಬ್ಯಾಂಡೇಜ್ ಬಳಸಿ ಅಂಟಿಸಲಾಗಿತ್ತು. ತಪಾಸಣೆಯ ಸಂದರ್ಭದಲ್ಲಿ ರನ್ಯಾ ಬಳಿ 12,56,43,362 ಕೋಟಿ ರೂಪಾಯಿ ಮೌಲ್ಯದ 14,213.05 ಗ್ರಾಂ ತೂಕದ ಚಿನ್ನ ಪತ್ತೆಯಾಗಿತ್ತು. ಇದನ್ನು ಆಧರಿಸಿ ಕಸ್ಟಮ್ಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂಧನಕ್ಕೆ ಒಳಪಡಿಸಿದ್ದರು.
Laxmi News 24×7