ಬೆಂಗಳೂರು, ಸೆಪ್ಟೆಂಬರ್ 06: ಬೂಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ (Banu Mushtaq) ಬಗ್ಗೆ ವಿರೋಧ ಕೇಳಿಬಂದಿದರೂ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದೇ ಇತ್ತೀಚೆಗೆ ಹಾಸನದ ಅಮೀರ್ ಮೊಹಲ್ಲಾದಲ್ಲಿನ ಅವರ ನಿವಾಸಕ್ಕೆ ತೆರಳಿ, ಸರ್ಕಾರದ ಪರ ಜಿಲ್ಲಾಡಳಿತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಿತ್ತು. ಸದ್ಯ ಈ ವಿಚಾರವಾಗಿ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ರಾಜ್ಯ ಸರ್ಕಾರ ಮೈಸೂರು ದಸರಾ ಉದ್ಘಾಟಕರಾಗಿ ಸಾಹಿತಿ ಬಾನು ಮುಷ್ತಾಕ್ರನ್ನು ಘೋಷಿಸಿದಾಗಿನಿಂದಲೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರೋಧ ವ್ಯಕ್ತಪಡಿಸಿದ್ದರು. ಅವರ ವಿರುದ್ಧ ಕಿಡಿಕಾರಿದ್ದರು. ಇದೀಗ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಬಾನು ಮುಷ್ತಾಕ್ ಹಿಂದೂ ವಿರೋಧಿ ಭಾವನೆ ಹೊಂದಿದ್ದಾರೆ
ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಪ್ರತಾಪ್ ಸಿಂಹ ಅರ್ಜಿ ಸಲ್ಲಿಸಿದ್ದು, ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು. ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆಯ ಸಂಪ್ರದಾಯವಿದೆ. ‘ಬಾನು ಮುಷ್ತಾಕ್ ಹಿಂದೂ ವಿರೋಧಿ, ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ’. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಅವರನ್ನು ಆಯ್ಕೆ ಮಾಡಿದೆ ಎಂದಿದ್ದಾರೆ.