ಬೆಂಗಳೂರು: ಬಿಜೆಪಿ ಕಾರ್ಯಕರ್ತ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಜೈಲು ವಾಸದಲ್ಲಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಎರಡು ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರಾಗಿದೆ.
ಮಗನ ಶಸ್ತ್ರಚಿಕಿತ್ಸೆ ಕಾರಣ ನೀಡಿ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಮಧ್ಯಂತರ ಆರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ಎರಡು ದಿನಗಳ ಕಾಲ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರರ ಮಗನ ಆರೋಗ್ಯದಲ್ಲಿ ಏರುಪೇರಾಗಿದ್ದು, ಶಸ್ತ್ರ ಚಿಕಿತ್ಸೆ ಮಾಡಿಸಬೇಕಾಗಿದೆ. ಆದ ಕಾರಣ 10 ದಿನಗಳ ಕಾಲ ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ. ಅಲ್ಲದೇ, ಎರಡು ದಿನಗಳ ಕಾಲ ಯಾವುದೇ ಕಡತಗಳಿಗೆ ಸಹಿ ಹಾಕಬಾರದು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಎಂದು ಷರತ್ತನ್ನು ವಿಧಿಸಿದೆ.
2016ರ ಜೂನ್ 15ರಂದು ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಜಿಮ್ನಿಂದ ಹೊರ ಬರುವ ವೇಳೆ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಇದರಲ್ಲಿ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಕೈವಾಡ ಇದೆ ಎಂಬ ಆರೋಪ ಹಿನ್ನೆಲೆಯಲ್ಲಿ ಅವರನ್ನು 2020ರ ನವೆಂಬರ್ 5ರಂದು ಸಿಬಿಐ ಬಂಧಿಸಿತ್ತು.
ಪ್ರಕರಣ ಸಂಬಂಧ ಆರೋಪಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ, ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ವಿನಯ್ ಕುಲಕರ್ಣಿ ಅವರ ಜಾಮೀನು ರದ್ದುಗೊಳಿಸಿ ಆದೇಶಿಸಿ, ವಾರದೊಳಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಿತ್ತು. ಅಂತೆಯೇ ಜೂನ್ 14 ರಂದು ವಿನಯ್ ಕುಲಕರ್ಣಿ ಜನಪ್ರತಿನಿಧಿಗಳ ಕೋರ್ಟ್ಗೆ ಶರಣಾಗಿದ್ದರು. ಬಳಿಕ ಅವರನ್ನು ಸಿಬಿಐ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿತ್ತು.